
BENGALURU : ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಇಂದು ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕ ಮಾತ್ರವಲ್ಲದೆ ಭಾರತಾದ್ಯಂತ ಸಾಹಿತ್ಯಾಸಕ್ತರಿಗೆ ಚಿರಪರಿಚಿತ ಹೆಸರು. ಎಸ್.ಎಲ್. ಭೈರಪ್ಪ ಅವರು ಕನ್ನಡ ಕಾದಂಬರಿ ಸಾಹಿತ್ಯಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಬಹುಮಾನಾರ್ಹ ಸೇವೆಯನ್ನು ನೀಡಿದ್ದಾರೆ. ಅವರ ರಚನೆಗಳು ಕನ್ನಡ ಭಾಷೆಯ ಸಮೃದ್ಧಿಗೆ ಅಪಾರ ಕೊಡುಗೆ ನೀಡಿವೆ.
ಸಾಹಿತ್ಯ ಕ್ಷೇತ್ರದಲ್ಲಿ ಅವರ ಅಪೂರ್ವ ಶ್ರಮ ಮತ್ತು ಸಂದರ್ಶನಗಳು ಬರಹ ಪ್ರಿಯರಿಗೆ ಸದಾ ಮಾರ್ಗ ದರ್ಶನವಾಗಿವೆ. ಇವರು ಅನೇಕ ಕಾದಂಬರಿಗಳು ಹಾಗೂ ಲೇಖನಗಳು ಕನ್ನಡ ಮತ್ತು ಭಾರತೀಯ ಸಾಹಿತ್ಯದಲ್ಲಿ ನಿತ್ಯವೂ ಪ್ರಭಾವ ಬೀರಿವೆ.
ಇನ್ನು ಹಿರಿಯ ಸಾಹಿತಿಯ ಎಸ್.ಎಲ್ ಭೈರಪ್ಪ ಅವರ ನಿಧನಕ್ಕೆ ದೇಶಾದ್ಯಾಂತ ಸಾಹಿತ್ಯ ಪ್ರೇಮಿಗಳು ಮತ್ತು ಅಭಿಮಾನಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ ಆಗಸ್ಟ್ 20, 1931 ಜನಿಸಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು. ಪ್ರೌಢ ಶಿಕ್ಷಣ ಹಾಗೂ ಕಾಲೇಜು ಓದು ಮೈಸೂರಿನಲ್ಲಿ ಮುಂದುವರೆಸಿದ ಭೈರಪ್ಪನವರು ಎಂ.ಎ.ನಲ್ಲಿ ಸುವರ್ಣ ಪದಕದೊಂದಿಗೆ ತೇರ್ಗಡೆಯಾದರು. ಬರೋಡಾ ದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ “ಸತ್ಯ ಮತ್ತು ಸೌಂದರ್ಯ”, ಎಂಬ ಇಂಗ್ಲಿಷ್ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಗಳಿಸಿದ್ದಾರೆ.
ಆಯಾ ಕಾಲದಲ್ಲಿ ಬಂದ ಅವರ ಕಾದಂಬರಿಗಳೆಲ್ಲಾ ಚರ್ಚೆಗೆ ಒಳಗಾಗಿವೆ. ಇಂಗ್ಲಿಷ್ ಭಾಷೆಯೂ ಸೇರಿದಂತೆ ಭಾರತೀಯ ಹಲವು ಭಾಷೆಗಳಿಗೆ ಭೈರಪ್ಪನವರ ಕಾದಂಬರಿಗಳು ಅನುವಾದಗೊಂ ಡಿವೆ. ಗೃಹಭಂಗ, ವಂಶವೃಕ್ಷ, ನೆಲೆ, ಸಾಕ್ಷಿ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ದಾಟು, ಧರ್ಮಶ್ರೀ, ಪರ್ವ, ಭಿತ್ತಿ ಮುಂತಾದವು ಹಿಂದಿ, ಮರಾಠಿಯಲ್ಲಿ ಜನಪ್ರಿಯವಾಗಿವೆ.




