ಮುಡಾ ಹಗರಣದ ಬಳಿಕ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಲಂಚ ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತ Snehamayi Krishnaನ್ನು ಬೆಂಗಳೂರು ಸಿಸಿಬಿ ಬಂಧಿಸಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಕೋಟ್ಯಾಂತರ ರೂಪಾಯಿ ಲಂಚ ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತರನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಮುಡಾ ಹಗರಣವನ್ನು ಬಯಲಿಗೆಳೆದ ಬಳಿಕ ಪ್ರಸಿದ್ಧಿಯಾಗಿದ್ದ ಸಾಮಾಜಿಕ ಕಾರ್ಯಕರ್ತ ಇದೀಗ ಹೊಸ ವಿವಾದದಲ್ಲಿ ಸಿಲುಕಿದ್ದಾರೆ.

ಮೈಸೂರು ಮೂಲದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಗಂಭೀರ ಲಂಚ ಆರೋಪ ಮಾಡಿದ್ದರು.
ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್ ಅವರಿಗೆ ಬಡ್ತಿ ಪಡೆಯಲು ಕೋಟ್ಯಾಂತರ ರೂಪಾಯಿ ಲಂಚ ನೀಡಲಾಗಿದೆ ಎಂದು ಅವರು ಆರೋಪಿಸಿದ್ದರು.
ಈ ಆರೋಪ ರಾಜ್ಯ ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನ ಮೂಡಿಸಿದ ಹಿನ್ನೆಲೆಯಲ್ಲಿ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿತು.

ದೂರು ದಾಖಲಾಗುತ್ತಿದ್ದಂತೆಯೇ ಸಿಸಿಬಿ ಕ್ರಮ
ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಡಾ ಆಯುಕ್ತ ಡಿ.ಬಿ. ನಟೇಶ್ ಸಿಸಿಬಿಗೆ ದೂರು ನೀಡಿದರು.
ಅದರ ಆಧಾರದ ಮೇಲೆ ಬೆಂಗಳೂರು ನಗರ ಸಿಸಿಬಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಯಿತು.
ಸಾಮಾಜಿಕ ಜಾಲತಾಣದಲ್ಲಿ ನಕಲಿ ದಾಖಲೆಗಳು ಹಾಗೂ ಆಡಿಯೋ ಕ್ಲಿಪ್ ಸೃಷ್ಟಿಸಿ ಅಪಪ್ರಚಾರ ನಡೆಸಿದ ಆರೋಪದ ಮೇಲೆ ಸ್ನೇಹಮಯಿ ಕೃಷ್ಣ ಅವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. ಬಳಿಕ ಅವರನ್ನು ಬಂಧಿಸಲಾಗಿದೆ.

ತನಿಖೆಯ ಭಾಗವಾಗಿ ನ್ಯಾಯಾಲಯದಿಂದ ಶೋಧನಾ ವಾರಂಟ್ ಪಡೆದುಕೊಂಡ ಸಿಸಿಬಿ ಅಧಿಕಾರಿಗಳು ಆರೋಪಿಯ ಮೈಸೂರು ನಿವಾಸದ ಮೇಲೆ ದಾಳಿ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದ ಧ್ವನಿ ಕ್ಲಿಪ್ ಕುರಿತು ಸಾಕ್ಷ್ಯ ಸಂಗ್ರಹಿಸಲಾಗಿದೆ.
ಸಿಸಿಬಿ ಪತ್ರಿಕಾ ಪ್ರಕಟಣೆಯಲ್ಲಿ ಏನು ಹೇಳಿದೆ?
ಸಿಸಿಬಿ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ದೂರದಾರರ ಫೋಟೋ ಹಾಗೂ ನಕಲಿ ದಾಖಲೆಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಫೇಸ್ಬುಕ್ ಖಾತೆಯ ಮೂಲಕ ಅಪ್ಲೋಡ್ ಮಾಡಿದ್ದ ಆಡಿಯೋ ಕ್ಲಿಪ್ಗಳ ಬಗ್ಗೆ ತಾಂತ್ರಿಕ ತನಿಖೆ ನಡೆಯುತ್ತಿದೆ ಎಂದು ತಿಳಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ನ್ಯಾಯ ಸಂಹಿತೆಯ (BNS) 335, 336, 340 ವಿಧಿಗಳು ಹಾಗೂ ಐಟಿ ಕಾಯ್ದೆಯ 66C ಮತ್ತು 66D ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನೋಟಿಸ್ ನೀಡಿ ಠಾಣೆಗೆ ಹಾಜರುಪಡಿಸಿ ವಿಚಾರಣೆ ನಡೆಸಲಾಗುತ್ತಿದೆ.
ಪ್ರಕರಣದ ಹಿನ್ನೆಲೆ
ಮುಡಾ ಹಗರಣದ ವಿಚಾರದಲ್ಲಿ ಗಮನ ಸೆಳೆದಿದ್ದ ಸ್ನೇಹಮಯಿ ಕೃಷ್ಣ, ಡಿ.ಬಿ. ನಟೇಶ್ ಬಡ್ತಿ ವಿಚಾರದಲ್ಲಿ ಲಂಚ ಆರೋಪ ಮಾಡಿದ್ದರು. ನಕಲಿ ಆಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಡಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.




