
Another Tiger killed in MM Hills : ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ರಾಜ್ಯ ಸರ್ಕಾರ ತೀವ್ರ ಗಂಭೀರತೆಯಿಂದ ಈ ಘಟನೆಗೆ ಸ್ಪಂದಿಸಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಪಿಸಿಸಿಎಫ್ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ, ಪಚ್ಚೆದೊಡ್ಡಿ ಗ್ರಾಮದ ಬಳಿ ಪತ್ತೆಯಾಗಿರುವ ಅರ್ಧ ಕಳೇಬರದ ಕುರಿತು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.
ಅಪರ ಮುಖ್ಯ ಕಾರ್ಯದರ್ಶಿಗೆ ಲಿಖಿತ ಆದೇಶ ನೀಡಿರುವ ಅವರು, 8 ದಿನಗಳಲ್ಲಿ ತನಿಖಾ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ಧಾಮದಲ್ಲಿ ಕಳೆದ 3 ವರ್ಷಗಳಲ್ಲಿ ನಡೆದಿರುವ ಕಳ್ಳಬೇಟೆ ಪ್ರಕರಣಗಳ ಪರಿಶೀಲನೆ, ಹಿಂದಿನ ತನಿಖಾ ವರದಿಗಳ ಪರಿಶೀಲನೆ ಮತ್ತು ಕರ್ತವ್ಯ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಅಲ್ದೇ “ಹುಲಿ ಹಂತಕರನ್ನು ಪತ್ತೆ ಮಾಡಿ, ಕಾನೂನು ಪ್ರಕಾರ ಕಠಿಣ ದಂಡನೆ ವಿಧಿಸಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು,” ಎಂದು ಖಂಡ್ರೆ ಸೂಚಿಸಿದ್ದಾರೆ.
ಈ ಘಟನೆ ಕಾನನದಲ್ಲಿ ನಡೆಯುತ್ತಿರುವ ವನ್ಯಜೀವಿಗಳ ಕಳ್ಳಬೇಟೆಯ ವಿರುದ್ಧ ಒಂದು ಎಚ್ಚರಿಕೆಯ ಘಂಟೆಯಾಗಿದ್ದು, ಇನ್ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಖಂಡ್ರೆ ಹೇಳಿದ್ದಾರೆ.




