
RAIN ALERT : ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ ಶುರುವಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ವರುಣನ ಅಬ್ಬರ ತೀವ್ರವಾಗಿದೆ. ನಿನ್ನೆ ರಾತ್ರಿ ಭಾರೀ ಮಳೆ ಸುರಿದ ಪರಿಣಾಮ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ವಾಹನ ಸವಾರರು ತೊಂದರೆ ಅನುಭವಿಸಿದ್ದಾರೆ.
ಇನ್ನು ಹವಾಮಾನ ಇಲಾಖೆ ಇಂದು ಕೂಡ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಮಳೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಸೆಪ್ಟಂಬರ್ 24ರವರೆಗೆ ಮಳೆ ಆಗುವ ಸಾಧ್ಯತೆ ಇದೆ.
ಬೆಂಗಳೂರು ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.




