Karnataka Weather : ಭಾನುವಾರದ ತನಕ ಬೆಂಗಳೂರಲ್ಲಿ ಮಳೆ, ಈ ಜಿಲ್ಲೆಗಳಿಗೂ ಎಚ್ಚರಿಕೆ!

Karnataka Weather : ರಾಜ್ಯದ ಹಲವು ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಮತ್ತು ಡಿಸೆಂಬರ್ 5ರಂದು ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಮಂಜು ಕವಿದ ವಾತಾವರಣವಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಹಗಲಿನ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ತನಕ ಇಳಿಯುವ ನಿರೀಕ್ಷೆಯಿದೆ. ಇನ್ನು ಡಿಸೆಂಬರ್ 7ರಿಂದ ಬೆಂಗಳೂರು ನಗರದೊಳಗೆ ಒಣಹವೆ ಸಾಧ್ಯತೆಯಿದೆ ಎಂದು ಇಲಾಖೆಯು ತಿಳಿಸಿದೆ.
ಎಲ್ಲೆಲ್ಲಿ ಮಳೆ ಸಾಧ್ಯತೆ..?
ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಹಗುರ ಮಳೆ ಹಾಗೂ ಗುಡುಗು ಸಹಿತ ಮಳೆಯ ಮುನ್ಸೂಚನೆಯಿದೆ. ಇನ್ನು ಬೆಂಗಳೂರು ಗ್ರಾಮಾಂತರ, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲೂ ದಿನವಿಡೀ ಹಗುರದಿಂದ ಮಧ್ಯಮ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಮತ್ತು ದಕ್ಷಿಣ ಕರ್ನಾಟಕದಲ್ಲಿ ಮಳೆ ಮುಂದುವರಿಕೆ
ದಕ್ಷಿಣ ಕನ್ನಡ, ಉಡುಪಿ (ಕರಾವಳಿ) ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಕೆಲವೆಡೆ ಗುಡುಗು ಸಹಿತ ಮಳೆಯ ನಿರೀಕ್ಷೆಯಿದೆ.ಇನ್ನು ಉತ್ತರ ಕನ್ನಡದ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಕೊಡಗು ಉಡುಪಿ ಮತ್ತು ಘಟ್ಟ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಹೆಚ್ಚಿದೆ.
ಇನ್ನೆಲ್ಲೆಲ್ಲಿ ಮಳೆ?
ಇನ್ನು ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿಯೂ ಹಗುರ ಮಳೆಯಾಗುವ ನಿರೀಕ್ಷೆಯಿದ್ದು, ರಾಮನಗರ ಮತ್ತು ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲೂ ಚದುರಿದಂತೆ ಮಳೆಯಾಗಬಹುದು.
ಇನ್ನು ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ಹಲವೆಡೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ನೋಡಿ : KN RAJANNA | ರಾಜಣ್ಣಗೆ BJP-JDS ನಿಂದ ಆಹ್ವಾನ ಯಾವ ಪಕ್ಷಕ್ಕೆ ರಾಜಣ್ಣ




