ಯೋಗೇಶ್ ಗೌಡ ಕೊಲೆ ಕೇಸಲ್ಲಿ Vinay Kulkarni ಗೆ ಬಿಗ್ ರಿಲೀಫ್ – ಜಾಮೀನು ಮಂಜೂರು

ಜಿಲ್ಲಾ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಕೇಸಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ (Vinay Kulkarni) ಬಿಗ್ ರಿಲೀಫ್ ಸಿಕ್ಕಿದೆ.
ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಜೀವಾವಧಿ ಶಿಕ್ಷೆಯನ್ನೂ ಅಮಾನತ್ತಿನಲ್ಲಿಟ್ಟಿದೆ.
ಹೈಕೋರ್ಟ್ ಆದೇಶವೇನು?
ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡುವಂತೆ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ವಿನಯ್ ಕುಲಕರ್ಣಿ ಹಾಗೂ ಮಾಜಿ ಪೊಲೀಸ್ ಇನ್ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್ಗೆ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಲಯ ಇಬ್ಬರೂ ತಲಾ 5 ಲಕ್ಷ ರೂಪಾಯಿ ಬಾಂಡ್ ಸಲ್ಲಿಸುವಂತೆ ಸೂಚಿಸಿದ್ದು, ಪಾಸ್ಪೋರ್ಟ್ ಅನ್ನು ಸೆಷನ್ಸ್ ಕೋರ್ಟ್ಗೆ ಒಪ್ಪಿಸಬೇಕು ಹಾಗೂ ದೇಶ ತೊರೆಯಬಾರದು ಎಂಬ ಷರತ್ತುಗಳನ್ನು ವಿಧಿಸಿದೆ.
ವಿಚಾರಣೆ ವೇಳೆ ವಿನಯ್ ಕುಲಕರ್ಣಿ ಪರ ವಕೀಲರು ಧಾರವಾಡ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧ ತೆರವುಗೊಳಿಸುವಂತೆ ಹಾಗೂ ಅದೇ ದಿನ ಬಿಡುಗಡೆಗೆ ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು.
ಇದನ್ನು ಓದಿ : ಯೋಗೇಶ್ ಗೌಡ ಹತ್ಯೆ ಕೇಸ್ – ವಿನಯ್ ಕುಲಕರ್ಣಿ ದೋಷಿ ಎಂದು ಕೋರ್ಟ್ ತೀರ್ಪು
ಏನಿದು ಪ್ರಕರಣ?
2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಮಂದಿಯ ವಿರುದ್ಧ ಆರೋಪಗಳು ಕೇಳಿಬಂದಿದ್ದವು.
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಸಿಬಿಐ ಸುದೀರ್ಘ ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸಿತ್ತು. ಸುಮಾರು ಹತ್ತು ವರ್ಷಗಳ ತನಿಖೆ ಮತ್ತು ನ್ಯಾಯಾಂಗ ವಿಚಾರಣೆಯ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯ ನಾಶ, ಮಾರಕಾಸ್ತ್ರಗಳಿಂದ ಹಲ್ಲೆ ಹಾಗೂ ಅಕ್ರಮ ಕೂಟ ಸೇರಿದಂತೆ ವಿವಿಧ ಆರೋಪಗಳಲ್ಲಿ ಹಲವರನ್ನು ದೋಷಿಗಳೆಂದು ತೀರ್ಪು ನೀಡಿತ್ತು.
ಈ ಪ್ರಕರಣದಲ್ಲಿ ಸೋಮಶೇಖರ್ ನ್ಯಾಮಗೌಡ ಹಾಗೂ ವಾಸುದೇವ್ ನಿಲೇಕಣಿ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು. ಉಳಿದ ದೋಷಿಗಳನ್ನು ಸಿಬಿಐ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಯ ಬಳಿಕ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು.
ಜೀವಾವಧಿ ಶಿಕ್ಷೆ
2026ರ ಏಪ್ರಿಲ್ 17ರಂದು 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಈ ವೇಳೆ ಮಾಜಿ ಇನ್ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್ಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಲಾಗಿತ್ತು.
ಇನ್ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ, ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದರು.
ಇದನ್ನು ನೋಡಿ : ಅಬ್ಬಬ್ಬಾ… ಕಳ್ಳರು ಬಂದಿಲ್ಲ, ಅಂಗಡಿ ಬಾಗಿಲು ಮುರಿದಿಲ್ಲ- ಇಲಿಯ ಅವಾಂತರದಿಂದ ಲಕ್ಷಾಂತರ ಚಿನ್ನ ಮಾಯ..!




