ರಾಜ್ಯದಲ್ಲಿ ಮತ್ತೆ ಹೆಚ್ಚಿದ ಕೊರೋನಾ ಭೀತಿ – 32 ಜನರಲ್ಲಿ ಸೋಂಕು ದೃಢ

ನೆರೆರಾಜ್ಯ ಆಂಧ್ರಪ್ರದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ರಾಜ್ಯದಲ್ಲಿ ಜುಲೈ ತಿಂಗಳ ಮೊದಲ 10 ದಿನಗಳಲ್ಲೇ 32 ಕ್ಕೂ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.
32 ಜನರಲ್ಲಿ ಸೋಂಕು ದೃಢ
ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಜೂನ್ ತಿಂಗಳಲ್ಲಿ ರಾಜ್ಯದಲ್ಲಿ ಕೇವಲ 14 ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಆದರೆ ಜುಲೈ ತಿಂಗಳ ಆರಂಭದ 10 ದಿನಗಳ ಅವಧಿಯಲ್ಲೇ ಸೋಂಕಿತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಒಟ್ಟು 193 ಶಂಕಿತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ 32 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಆಸ್ಪತ್ರೆಗಳಿಗೆ ಮುನ್ನೆಚ್ಚರಿಕೆ ಸೂಚನೆ
ಕೋವಿಡ್ ಪ್ರಕರಣಗಳು ಮತ್ತೆ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ.
ಅಗತ್ಯ ಸಂದರ್ಭದಲ್ಲಿ ಬಳಕೆಗೆ ಬರುವಂತೆ ಕೋವಿಡ್ ವಾರ್ಡ್ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳಲು ಹಾಗೂ ವೈದ್ಯಕೀಯ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.
ಇದನ್ನು ಓದಿ : ಕೋವಿಡ್ಗೆ ಇಬ್ಬರು ಬಲಿ! ಗಡಿಭಾಗ ಪಾವಗಡದಲ್ಲಿ ತೀವ್ರ ನಿಗಾ

ಆಂಧ್ರ ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್
ಆಂಧ್ರಪ್ರದೇಶದೊಂದಿಗೆ ಗಡಿ ಹಂಚಿಕೊಂಡಿರುವ ಕರ್ನಾಟಕದ ಜಿಲ್ಲೆಗಳಲ್ಲಿ ನಿಗಾ ಹೆಚ್ಚಿಸಲಾಗಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಗಡಿ ಭಾಗಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ ಆಂಧ್ರದಿಂದ ಆಗಮಿಸುವವರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.
ಸಾರ್ವಜನಿಕರು ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ. ಆದರೆ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.
ಆಂಧ್ರಪ್ರದೇಶದಲ್ಲಿ ಕೋವಿಡ್ಗೆ ಇಬ್ಬರು ಬಲಿ!
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು 8 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಇಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಡಪದ ರಾಜಂಪೇಟೆ ಪ್ರದೇಶದ 52 ವರ್ಷದ ವ್ಯಕ್ತಿಯೊಬ್ಬರಿಗೆ ಜ್ವರ ಮತ್ತು ಕೆಮ್ಮಿನ ಬಳಿಕ ಕೋವಿಡ್ ಸೋಂಕು ದೃಢಪಟ್ಟಿತ್ತು. ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನಲ್ಲಿ (CMC) ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿನಿಗೂ ಕೋವಿಡ್
ಮತ್ತೊಂದೆಡೆ ಕಡಪ ಮೂಲದ 43 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇದಲ್ಲದೆ, ಕಡಪ ವೈದ್ಯಕೀಯ ಕಾಲೇಜಿನ 25 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೂ ಕೋವಿಡ್ ಸೋಂಕು ದೃಢಪಟ್ಟಿದೆ.
ಇದನ್ನು ನೋಡಿ : ಶೈಕ್ಷಣಿಕ ಅವ್ಯವಸ್ಥೆ ವಿರುದ್ಧ ಬೇಸತ್ತ STUDENTS- BEO ಕಚೇರಿಗೆ ಮುತ್ತಿಗೆ ಹಾಕಿ ಪ್ರೊಟೆಸ್ಟ್




