Karnataka Weather : ಕಳೆದ ಎರಡು ವಾರಗಳಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಇನ್ನಷ್ಟು ತೀವ್ರಗೊಳ್ಳುವ ಮುನ್ಸೂಚನೆ ಸಿಕ್ಕಿದೆ.

Karnataka Weather : ಬೆಂಗಳೂರು ಸೇರಿದಂತೆ ಕರ್ನಾಟಕದ ಕರಾವಳಿ ಮತ್ತು ಒಳನಾಡು ಭಾಗಗಳಲ್ಲಿ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಮಳೆ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ರಿಂದ 6 ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆ ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ರಾಜ್ಯಕ್ಕೆ ಮುಂಗಾರು ಪ್ರವೇಶಕ್ಕೆ ಅನುಕೂಲಕರ ವಾತಾವರಣ
ಹವಾಮಾನ ಇಲಾಖೆಯ ಪ್ರಕಾರ, ನೈಋತ್ಯ ಮುಂಗಾರು ಮಾರುತಗಳ ಪ್ರವೇಶಕ್ಕೆ ವಾತಾವರಣ ಸಂಪೂರ್ಣ ಅನುಕೂಲಕರವಾಗಿದೆ. ಮುಂದಿನ 2 ರಿಂದ 3 ದಿನಗಳಲ್ಲಿ ಬಂಗಾಳಕೊಲ್ಲಿ, ಆಗ್ನೇಯ ಸಮುದ್ರ ಹಾಗೂ ಅಂಡಮಾನ್ ಸಮುದ್ರದ ಉಳಿದ ಭಾಗಗಳಿಗೆ ಮುಂಗಾರು ಮತ್ತಷ್ಟು ವಿಸ್ತರಿಸುವ ಸಾಧ್ಯತೆ ಇದ್ದು, ಶೀಘ್ರದಲ್ಲೇ ಕರ್ನಾಟಕಕ್ಕೂ ಮುಂಗಾರು ಪ್ರವೇಶಿಸುವ ನಿರೀಕ್ಷೆಯಿದೆ.

ಬೆಂಗಳೂರಿಗೆ ಆಲಿಕಲ್ಲು ಮಳೆ ಸಾಧ್ಯತೆ
ರಾಜಧಾನಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯ ಜೊತೆಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯೂ ಆಗುವ ಮುನ್ಸೂಚನೆ ನೀಡಲಾಗಿದೆ.
ಇನ್ನು ಮಳೆಯ ಪರಿಣಾಮವಾಗಿ ನಗರದ ತಾಪಮಾನದಲ್ಲಿ ಇಳಿಕೆಯಾಗಲಿದ್ದು, ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ತಿಳಿಸಿದೆ. ಮೇ 28 ಮತ್ತು 30ರಂದು ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ.
ಇದನ್ನು ಓದಿ : ರಾಜ್ಯಾದ್ಯಂತ ಮುಂದಿನ 7 ದಿನ ಭಾರೀ ಮಳೆ ಮುನ್ಸೂಚನೆ!

ಯಾವ ಜಿಲ್ಲೆಗಳಲ್ಲಿ ಮಳೆ?
ದಕ್ಷಿಣ ಒಳನಾಡು:
ಚಾಮರಾಜನಗರ, ಕೋಲಾರ, ರಾಮನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡು:
ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳು:
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಲಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಗುಡುಗು-ಮಿಂಚಿನ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನು ನೋಡಿ : ಚಿನ್ನ ಬಿಟ್ಟು ಬೆಳ್ಳಿಯನ್ನೇ ಕದ್ದಿದ್ದ ಕಳ್ಳರು – ರಾಜಸ್ಥಾನದಲ್ಲಿ ಖದೀಮರ GANG ARREST..!




