Rain Alert : ಭಾರಿ ಮಳೆ ಮುನ್ಸೂಚನೆ – ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (IMD) ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.
ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ (ಪಿಯು) ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯ
ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, 12ನೇ ತರಗತಿಯವರೆಗಿನ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ
ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿ ಶಿಕ್ಷಣ ಸಂಸ್ಥೆಗಳು ತರಗತಿಗಳನ್ನು ನಡೆಸಿದರೆ ವಿಪತ್ತು ನಿರ್ವಹಣಾ ಕಾಯ್ದೆ-2005ರಡಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಇದನ್ನು ಓದಿ : ಮೂರು ದಿನ ಮಳೆ – ಹಲವು ಜಿಲ್ಲೆಗಳಿಗೆ ಯೊಲ್ಲೋ ಅಲರ್ಟ್

ಸಾರ್ವಜನಿಕರಿಗೆ ಎಚ್ಚರಿಕೆ
ಇನ್ನು ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ನದಿಗಳು, ಹೊಳೆಗಳು ಹಾಗೂ ಸಮುದ್ರ ತೀರಗಳು ಅಪಾಯಕಾರಿಯಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಯಾವುದೇ ಕಾರಣಕ್ಕೂ ಜಲಾಶಯಗಳ ಸಮೀಪ ಹೋಗಬಾರದು ಎಂದು ಜಿಲ್ಲಾಡಳಿತ ಸೂಚಿಸಿದೆ.
ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸಿ, ನೀರು ತುಂಬಿರುವ ತಗ್ಗು ಪ್ರದೇಶಗಳು, ಕೆರೆ, ನದಿ ಹಾಗೂ ಸಮುದ್ರ ತೀರಗಳಿಗೆ ಮಕ್ಕಳು ತೆರಳದಂತೆ ನೋಡಿಕೊಳ್ಳುವಂತೆ ಮನವಿ ಮಾಡಲಾಗಿದೆ.
ಅಧಿಕಾರಿಗಳಿಗೆ ತುರ್ತು ಸೂಚನೆ
ತುರ್ತು ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲೇ ಮೊಕ್ಕಾಂ ಹೂಡಬೇಕೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಲು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.
ಇದಲ್ಲದೆ, ಮಳೆಯಿಂದ ಸಂತ್ರಸ್ತರಾಗುವವರಿಗಾಗಿ ಪ್ರತಿ ತಾಲೂಕಿನಲ್ಲೂ ಕಾಳಜಿ ಕೇಂದ್ರಗಳನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿಡಲು ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದೆ.

ಇದನ್ನು ನೋಡಿ : ನವದಂಪತಿ ಬಾಳಲ್ಲಿ ಕ್ರೂರ ವಿಧಿಯಾಟ – ಭೀಕರ ಅಪಘಾ ದಲ್ಲಿ ನವವಧು ಸಾ*




