JOB ALERT : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬಂಪರ್ ನೇಮಕಾತಿ: 1,421 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜ್ಯದ ಯುವಕರಿಗೆ ಕರ್ನಾಟಕ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1,421 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
1,421 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಿಕ್ಕುಳಿದ ವೃಂದದಲ್ಲಿ ಖಾಲಿ ಇರುವ ಸಿಎಆರ್ ಮತ್ತು ಡಿಎಆರ್ ವಿಭಾಗದ ಪುರುಷ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 37 ಸಾವಿರ 500 ರೂಪಾಯಿಯಿಂದ 76 ಸಾವಿರ 100 ರೂಪಾಯಿವರೆಗೆ ವೇತನ ದೊರೆಯಲಿದೆ.

ಈಗಲೇ ಅರ್ಜಿ ಸಲ್ಲಿಸಿ
ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಜುಲೈ 22 ಕೊನೆಯ ದಿನಾಂಕವಾಗಿದೆ. ಅರ್ಜಿ ಶುಲ್ಕ ಪಾವತಿಸಲು ಜುಲೈ 24ರವರೆಗೆ ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಹತೆ
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಸಿಬಿಎಸ್ಇ, ಐಸಿಎಸ್ಇ, ಎನ್ಐಒಎಸ್ನ 12ನೇ ತರಗತಿ ಹಾಗೂ ಮೂರು ವರ್ಷಗಳ ಡಿಪ್ಲೊಮಾ ವಿದ್ಯಾರ್ಹತೆಯನ್ನು ಕೂಡ ತತ್ಸಮಾನ ಎಂದು ಪರಿಗಣಿಸಲಾಗಿದೆ.
ಇದನ್ನು ಓದಿ : 3,991 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ ಸಡಿಲಿಕೆ
ಸರ್ಕಾರವು ಈ ನೇಮಕಾತಿಗೆ ಒಂದು ಬಾರಿಯ ವಿಶೇಷ ವಯೋಮಿತಿ ಸಡಿಲಿಕೆ ನೀಡಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ, ಎಸ್ಸಿ, ಎಸ್ಟಿ ಹಾಗೂ ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಮತ್ತು ಅರಣ್ಯ ಪ್ರದೇಶದ ಬುಡಕಟ್ಟು ಅಭ್ಯರ್ಥಿಗಳಿಗೆ 38 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ ಮತ್ತು ದೈಹಿಕ ಸಹಿಷ್ಣುತೆ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ. ಸೆಪ್ಟೆಂಬರ್ 6ರಂದು ನಡೆಯುವ ಲಿಖಿತ ಪರೀಕ್ಷೆಯಲ್ಲಿ 100 ಅಂಕಗಳ ವಸ್ತುನಿಷ್ಠ ಪ್ರಶ್ನೆಗಳು ಇರಲಿದ್ದು, ತಪ್ಪು ಉತ್ತರಗಳಿಗೆ ಋಣಾತ್ಮಕ ಅಂಕಗಳ ವ್ಯವಸ್ಥೆಯೂ ಇದೆ.
ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗೆ ಕರೆಯಲಾಗುತ್ತದೆ. 1600 ಮೀಟರ್ ಓಟ, ಉದ್ದ ಜಿಗಿತ ಅಥವಾ ಎತ್ತರ ಜಿಗಿತ ಹಾಗೂ ಗುಂಡು ಎಸೆತ ಸ್ಪರ್ಧೆಗಳ ಮೂಲಕ ಅಭ್ಯರ್ಥಿಗಳ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ.

ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಗುಡ್ನ್ಯೂಸ್
ಒಟ್ಟಾರೆ, ಪೊಲೀಸ್ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಸಾವಿರಾರು ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಇದನ್ನು ನೋಡಿ : MADHUGIRIಯಲ್ಲಿ ಸರ್ಕಾರಿ ಖಜಾನೆಗೆ ಕನ್ನ- ಇಬ್ಬರು ಮುಖ್ಯ ಆರೋಪಿಗಳು ಅರೆಸ್ಟ್.!




