ನಾಳೆಯ Police Constable ಪರೀಕ್ಷೆಗೆ `ಹಿಜಾಬ್’ ಗೆ ಅವಕಾಶವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ರಾಜ್ಯದಲ್ಲಿ ನಾಳೆ (ಆಗಸ್ಟ್ 2) ನಡೆಯಲಿರುವ ಪೊಲೀಸ್ ಕಾನ್ಸ್ಟೆಬಲ್ (Police Constable) ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಹಿಜಾಬ್ ಸೇರಿದಂತೆ ಧಾರ್ಮಿಕ ಉಡುಪುಗಳಿಗೆ ಅವಕಾಶ ಇರುವುದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಪರೀಕ್ಷಾ ಸಿದ್ಧತೆಗಳ ಕುರಿತು ಮಾತನಾಡಿದ ಸಚಿವರು, ಅಭ್ಯರ್ಥಿಗಳು ಧಾರ್ಮಿಕ ಉಡುಪುಗಳನ್ನು ಧರಿಸುವುದಕ್ಕೆ ನಿರ್ಬಂಧವಿದ್ದು, ಆದರೆ ಜನಿವಾರ, ಉಡುದಾರ, ಮಾಂಗಲ್ಯ ಸರ ಹಾಗೂ ಉಂಗುರ ಧರಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
ಮಾಸ್ಕ್ ಧರಿಸುವುದಕ್ಕೂ ನಿರ್ಬಂಧ!
ಎಲೆಕ್ಟ್ರಾನಿಕ್ ಸಾಧನಗಳು ಸೇರಿದಂತೆ ಯಾವುದೇ ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವಂತಿಲ್ಲ. ಶೂ, ಜಾಕೆಟ್ ಹಾಗೂ ಮಾಸ್ಕ್ ಧರಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದ್ದು, ಈ ಎಲ್ಲ ನಿಯಮಗಳನ್ನು ಪ್ರವೇಶ ಪತ್ರದ ಹಿಂಭಾಗದಲ್ಲಿಯೇ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರಿಕೆ
ಸೋಶಿಯಲ್ ಮಿಡಿಯಾಗಳಲ್ಲಿ ಸುಳ್ಳು ಸುದ್ದಿ ಮತ್ತು ವದಂತಿಗಳನ್ನು ಹರಡುವವರ ವಿರುದ್ಧ ಎಚ್ಚರಿಕೆಯಿಂದ ಇರಬೇಕು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
“ಕಳೆದ ಬಾರಿ ಎರಡು ನಿಮಿಷ ತಡವಾಗಿ ಬಂದ ವಿಚಾರಕ್ಕೂ ಅನಗತ್ಯ ಗಲಾಟೆ ಮಾಡಲಾಗಿತ್ತು. ಪ್ರಶ್ನೆ ಪತ್ರಿಕೆ ವಿತರಣೆಯಲ್ಲಿ ವಿಳಂಬವಾದಾಗ ಪೇಪರ್ ಲೀಕ್ ಎಂಬ ಅಪಪ್ರಚಾರ ನಡೆಸಲಾಗಿತ್ತು. ಇಂತಹ ಘಟನೆಗಳು ಮರುಕಳಿಸದಂತೆ ಈ ಬಾರಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲಾಗಿದೆ. ಪರೀಕ್ಷೆಗೆ ಗೈರಾದ ಅಭ್ಯರ್ಥಿಗಳ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೊಠಡಿಯಲ್ಲೇ ಕಡ್ಡಾಯವಾಗಿ ಇರಿಸಲು ಸೂಚನೆ ನೀಡಲಾಗಿದೆ,” ಎಂದು ಸಚಿವರು ಹೇಳಿದರು.
ಇದನ್ನು ಓದಿ : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬಂಪರ್ ನೇಮಕಾತಿ!

ಸುಮಾರು 3,400 ಹುದ್ದೆಗಳಿಗೆ ಪರೀಕ್ಷೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ರಾಜ್ಯ ಪೊಲೀಸ್ ಇಲಾಖೆಯ ವಿವಿಧ ವೃಂದಗಳ ಸುಮಾರು 3,400 ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಆಗಸ್ಟ್ 2ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.00 ಗಂಟೆಯವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ. ಪರೀಕ್ಷೆಯನ್ನು ಪಾರದರ್ಶಕ, ಶಾಂತಿಯುತ ಹಾಗೂ ಅಕ್ರಮರಹಿತವಾಗಿ ನಡೆಸಲು ಕೆಇಎ ಮತ್ತು ಸ್ಥಳೀಯ ಆಡಳಿತ ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಂಡಿವೆ.
ಪರೀಕ್ಷಾ ದಿನದ ಪ್ರಮುಖ ನಿಯಮಗಳು
- ಉದ್ದ ತೋಳಿನ ಅಂಗಿ (Full Sleeves) ಮತ್ತು ಶೂ ಧರಿಸಿ ಬರುವುದನ್ನು ನಿಷೇಧಿಸಲಾಗಿದೆ.
- ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್, ಬ್ಲೂಟೂತ್ ಸಾಧನಗಳು, ಇತರೆ ಎಲೆಕ್ಟ್ರಾನಿಕ್ ಉಪಕರಣಗಳು, ನೋಟ್ಸ್, ಬ್ಯಾಗ್ ಹಾಗೂ ಆಹಾರ-ಪಾನೀಯಗಳನ್ನು ಪರೀಕ್ಷಾ ಕೇಂದ್ರದೊಳಗೆ ತೆಗೆದುಕೊಂಡು ಹೋಗುವಂತಿಲ್ಲ.
- ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಲಾಗುತ್ತದೆ.
- ಅಕ್ರಮ ತಡೆಗಟ್ಟಲು ಪರೀಕ್ಷಾ ಕೇಂದ್ರಗಳಲ್ಲಿ ಬ್ಲೂಟೂತ್ ಜಾಮರ್ಗಳನ್ನು ಅಳವಡಿಸಲಾಗುತ್ತದೆ.
- ಪರೀಕ್ಷಾ ಅವಧಿಯಲ್ಲಿ ಕೇಂದ್ರಗಳ ಸಮೀಪದ ಝೆರಾಕ್ಸ್ ಅಂಗಡಿಗಳು ಮತ್ತು ಸೈಬರ್ ಸೆಂಟರ್ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.

ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ ಒಬ್ಬ ಮಹಿಳಾ ಹಾಗೂ ಒಬ್ಬ ಪುರುಷ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಮುಖ್ಯ ಅಧೀಕ್ಷಕರು, ವೀಕ್ಷಕರು, ಮಾರ್ಗಾಧಿಕಾರಿಗಳು ಹಾಗೂ ವಿಶೇಷ ಜಾಗೃತ ದಳಗಳು (Flying Squads) ಪರೀಕ್ಷೆಯ ಮೇಲ್ವಿಚಾರಣೆ ನಡೆಸಲಿವೆ.
ಪರೀಕ್ಷೆಯ ವೇಳೆ ವಿದ್ಯುತ್ ವ್ಯತ್ಯಯವಾಗದಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಪರೀಕ್ಷಾ ಕೊಠಡಿಗಳಲ್ಲಿ ಕುಡಿಯುವ ನೀರು, ಬೆಳಕು, ಗಾಳಿ, ಗೋಡೆ ಗಡಿಯಾರ ಹಾಗೂ ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ನಿರ್ದೇಶಿಸಲಾಗಿದೆ.
ಅಭ್ಯರ್ಥಿಗಳಿಗೆ ಸೂಚನೆ
ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ನೀಡಿರುವ ಎಲ್ಲಾ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸುವಂತೆ ಹಾಗೂ ಯಾವುದೇ ನಿಷೇಧಿತ ವಸ್ತುಗಳನ್ನು ತರದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನು ನೋಡಿ : RADHANAGARI DAM ಸಂಪೂರ್ಣ ಭರ್ತಿ – KARNATAKAದತ್ತ ಹೆಚ್ಚಿದ ನೀರಿನ ಹರಿವು..!




