ಜಲ ಮಾಲಿನ್ಯದ ಆತಂಕ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ PoP ಗಣೇಶ ಮೂರ್ತಿ ಸ್ಥಾಪನೆಗಿಲ್ಲ ಅವಕಾಶ

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಗಣೇಶೋತ್ಸವಗಳಿಗೆ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶ ನೀಡದಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ ನೀಡಿದ್ದಾರೆ. ಪರಿಸರ ಸಂರಕ್ಷಣೆ ಮತ್ತು ಜಲಮೂಲಗಳ ರಕ್ಷಣೆ ದೃಷ್ಟಿಯಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳಿಗೆ ಮಾತ್ರ ಅನುಮತಿ ನೀಡುವಂತೆ ಸೂಚಿಸಲಾಗಿದೆ.
ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚನೆ
ಸಚಿವರು ನೀಡಿರುವ ನಿರ್ದೇಶನದಲ್ಲಿ, ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ, ದಾಸ್ತಾನು, ಸಾಗಾಟ ಮತ್ತು ಮಾರಾಟಕ್ಕೆ ಕಟ್ಟುನಿಟ್ಟಿನ ನಿಯಂತ್ರಣ ಹೇರಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಕಾರ ಪಡೆಯುವಂತೆ ತಿಳಿಸಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ, 2023ರ ಸೆಪ್ಟೆಂಬರ್ 15ರಂದು ಹೊರಡಿಸಿದ್ದ ಸರ್ಕಾರಿ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಲಾಗಿದೆ.

ಆರೋಗ್ಯದ ಮೇಲೆ ದುಷ್ಪರಿಣಾಮ
ಸಚಿವರ ಪ್ರಕಾರ, ಪಿಒಪಿ ಮೂರ್ತಿಗಳಲ್ಲಿ ಕ್ಯಾಲ್ಸಿಯಂ ಸಲ್ಫೇಟ್ ಹೆಮಿಹೈಡ್ರೇಟ್ ಸೇರಿದಂತೆ ಹಲವು ರಾಸಾಯನಿಕ ಅಂಶಗಳಿದ್ದು, ಅವುಗಳಿಗೆ ಪಾದರಸ, ಕ್ಯಾಡ್ಮಿಯಂ, ಸೀಸ ಹಾಗೂ ಇತರ ರಾಸಾಯನಿಕ ಬಣ್ಣಗಳನ್ನು ಬಳಕೆ ಮಾಡಲಾಗುತ್ತದೆ. ಇಂತಹ ಮೂರ್ತಿಗಳನ್ನು ಕೆರೆ, ನದಿ, ಬಾವಿ ಸೇರಿದಂತೆ ಜಲಮೂಲಗಳಲ್ಲಿ ವಿಸರ್ಜಿಸಿದಾಗ ನೀರು ಮಾಲಿನ್ಯಗೊಳ್ಳುವುದರ ಜೊತೆಗೆ ಜಲಚರಗಳು ಹಾಗೂ ಜನ-ಜಾನುವಾರುಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ : ಹಿಂದೂ-ಮುಸ್ಲಿಂ ಏಕತೆಯಲ್ಲಿ ಗಣೇಶ ವಿಸರ್ಜನಾ ಮಹೋತ್ಸವ

ಸಚಿವರ ನಿರ್ದೇಶನ ಪತ್ರದಲ್ಲಿ ಏನಿದೆ?
ಈ ಹಿನ್ನೆಲೆಯಲ್ಲಿ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ-1974ರ ಕಲಂ 33(ಎ) ಅಡಿಯಲ್ಲಿ ರಾಜ್ಯದ ಯಾವುದೇ ಜಲಮೂಲದಲ್ಲಿ ಪಿಒಪಿ ಮೂರ್ತಿಗಳ ವಿಸರ್ಜನೆಯನ್ನು ನಿಷೇಧಿಸಲಾಗಿದೆ. ಈ ಸಂಬಂಧ 2023ರ ಸೆಪ್ಟೆಂಬರ್ 15ರಂದು ಹೊರಡಿಸಲಾದ ಸರ್ಕಾರಿ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಹೈಕೋರ್ಟ್ ಕೂಡ ನಿರ್ದೇಶನ ನೀಡಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿರುವ ಸಚಿವರು, ಪರಿಸರ ಹಾಗೂ ಜಲಮೂಲಗಳ ಸಂರಕ್ಷಣೆಯ ದೃಷ್ಟಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆಗೆ ಮಾತ್ರ ಅನುಮತಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇದನ್ನು ನೋಡಿ : ಇದು PRAJASHAKTHI TVಯ BIG IMPACT – ಸುದ್ದಿ ಬಿತ್ತರಿಸಿದ ಕೆಲವೇ ಗಂಟೆಗಳಲ್ಲಿ ಕ್ರಮ




