Congress ನಲ್ಲಿ ಜೋರಾದ ಸಚಿವ ಸಂಪುಟ ಲಾಬಿ – ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮೂವರ ಮಧ್ಯೆ ಪೈಪೋಟಿ

ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಬೆನ್ನಲ್ಲೇ ಇದೀಗ ಸಚಿವ ಸಂಪುಟ ರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕಸರತ್ತು ಜೋರಾಗಿದೆ. ನೂತನ ಮುಖ್ಯಮಂತ್ರಿ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲು ಸಜ್ಜಾಗಿರುವ ಬೆನ್ನಲ್ಲೇ ಸಚಿವಾಕಾಂಕ್ಷಿಗಳು ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ದೆಹಲಿಯಲ್ಲಿ ಲಾಬಿ ಆರಂಭಿಸಿದ್ದಾರೆ.

ದೆಹಲಿಯತ್ತ ಹೊರಟ ಕಾಂಗ್ರೆಸ್ ನಾಯಕರು
ಇಂದು ನೂತನ ಸಚಿವರ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ. ಇವರ ಜೊತೆ ಸಚಿವರಾದ ಕೆ.ಜೆ. ಜಾರ್ಜ್, ಹೆಚ್.ಸಿ. ಮಹದೇವಪ್ಪ, ಎಂ.ಬಿ. ಪಾಟೀಲ್, ಬೈರತಿ ಸುರೇಶ್, ಜಮೀರ್ ಅಹ್ಮದ್ ಖಾನ್, ಪೊನ್ನಣ್ಣ ಹಾಗೂ ಯತೀಂದ್ರ ಸಿದ್ದರಾಮಯ್ಯ ಕೂಡ ದೆಹಲಿಗೆ ತೆರಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಬೇಡಿಕೆ ಇಟ್ಟಿರುವ ಶಾಸಕ ಸತೀಶ್ ಜಾರಕಿಹೊಳಿ
ಇನ್ನು ಸಚಿವ ಸಂಪುಟ ರಚನೆಗೂ ಮುನ್ನವೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ ಕೂಡ ಜೋರಾಗಿದೆ. ಅಹಿಂದಾ ಸಮೀಕರಣದ ಆಧಾರದಲ್ಲಿ ಸಚಿವ ಸ್ಥಾನ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಬೇಡಿಕೆ ಇಟ್ಟಿರುವ ಶಾಸಕ ಸತೀಶ್ ಜಾರಕಿಹೊಳಿ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಜಾರಕಿಹೊಳಿ ಈಗಾಗಲೇ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರ ಜೊತೆಯೂ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ : ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್!

ತಂಗಡಗಿ ಜೊತೆ ಹೈಕಮಾಂಡ್ ನಾಯಕರು ಮಾತುಕತೆ
ಮತ್ತೊಂದೆಡೆ ಹಿಂದುಳಿದ ವರ್ಗಗಳ ಸಮೀಕರಣದ ಲೆಕ್ಕಾಚಾರದಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೆಸರು ಕೂಡ ಬಲವಾಗಿ ಕೇಳಿಬರುತ್ತಿದೆ. ಕಾಂಗ್ರೆಸ್ನ ಹಿರಿಯ ನಾಯಕರಾಗಿರುವ ಹರಿಪ್ರಸಾದ್ ಅವರಿಗೆ ಪಕ್ಷದ ಸಂಘಟನೆ ಜವಾಬ್ದಾರಿ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನಲಾಗುತ್ತಿದೆ. ಇದರ ಮಧ್ಯೆ ಸಚಿವ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ಗೆ ಸಚಿವ ಶಿವರಾಜ್ ತಂಗಡಗಿ ಕೂಡ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದು, ತಂಗಡಗಿ ಜೊತೆ ಹೈಕಮಾಂಡ್ ನಾಯಕರು ಮಾತುಕತೆ ನಡೆಸಿದ್ದು, ಸಚಿವ ಸ್ಥಾನ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೂ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಮೂರು ಪ್ರತ್ಯೇಕ ಪಟ್ಟಿಗಳು ಸಿದ್ಧ
ಇನ್ನು ಸಚಿವ ಸಂಪುಟಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಪಟ್ಟಿಗಳು ಸಿದ್ಧವಾಗಿವೆ ಎನ್ನಲಾಗ್ತಿದ್ದು, ಡಿ.ಕೆ. ಶಿವಕುಮಾರ್ ಅವರ ಒಂದು ಪಟ್ಟಿ, ಸಿದ್ದರಾಮಯ್ಯ ಅವರ ಒಂದು ಪಟ್ಟಿ ಹಾಗೂ ಹೈಕಮಾಂಡ್ನ ಪ್ರತ್ಯೇಕ ಪಟ್ಟಿ ಸಿದ್ಧವಾಗಿದ್ದು, ಇಂದು ಈ ಮೂರು ಪಟ್ಟಿಗಳನ್ನ ಪರಿಶೀಲಿಸಿ ಅಂತಿಮ ಪಟ್ಟಿ ಸಿದ್ಧಪಡಿಸುವ ಸಾಧ್ಯತೆ ಇದೆ.
ಯಾರು ಸಚಿವರಾಗುತ್ತಾರೆ ? ಯಾರು ಕೆಪಿಸಿಸಿ ಅಧ್ಯಕ್ಷರಾಗುತ್ತಾರೆ?
ಒಟ್ನಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದ ಸಚಿವ ಸಂಪುಟ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕಸರತ್ತು ಕಾಂಗ್ರೆಸ್ ಪಾಳಯದಲ್ಲಿ ತೀವ್ರಗೊಂಡಿದ್ದು, ದೆಹಲಿಯಲ್ಲಿ ನಡೆಯಲಿರುವ ಹೈಕಮಾಂಡ್ ಸಭೆಯ ಬಳಿಕವೇ ಯಾರು ಸಚಿವರಾಗುತ್ತಾರೆ, ಯಾರು ಕೆಪಿಸಿಸಿ ಅಧ್ಯಕ್ಷರಾಗುತ್ತಾರೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.
ಇದನ್ನು ನೋಡಿ : COMMERCIAL CYLINDER ದರ ಮತ್ತೆ ಏರಿಕೆ – HOTEL ಊಟ ಮತ್ತಷ್ಟು ದುಬಾರಿಯಾಗುತ್ತಾ.?




