BANGALORE : ಕೋವಿಡ್‌ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸಿದರೆ ಸೂಕ್ತ ಕ್ರಮ | ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

BANGALORE NEWS : ರಾಜ್ಯದಲ್ಲಿ ಮತ್ತೆ ಕೋವಿಡ್ [COVID] ಪ್ರಕರಣಗಳು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ [SIDDARAMAIAH] ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಕೋವಿಡ್ ಪರಿಸ್ಥಿತಿಯ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲದೆಯಾದರೂ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯ ಎಂದು ಸಿಎಂ ಸಿದ್ದರಾಮ ತಿಳಿಸಿದರು.

ಮೇ ತಿಂಗಳ ನಂತರ ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಲಾಗಿದ್ದು, ಪ್ರತಿ ದಿನ ಸರಾಸರಿ 500 ಪರೀಕ್ಷೆಗಳು ನಡೆಯುತ್ತಿವೆ. ಕಳೆದ 10 ದಿನಗಳಲ್ಲಿ 5 ಸಾವಿರಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗಿದ್ದು, 862 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಅವಧಿಯಲ್ಲಿ 11 ಸಾವುಗಳು ವರದಿಯಾಗಿದ್ದು, ಅದರಲ್ಲಿ ಕೇವಲ ಒಂದು ಸಾವಿಗೆ ನೇರವಾಗಿ ಕೋವಿಡ್ ಕಾರಣವಾಗಿರುವ ಶಂಕೆ ಇದೆ. ಉಳಿದ ಪ್ರಕರಣಗಳಲ್ಲಿ ಇತರ ಗಂಭೀರ ಆರೋಗ್ಯ ಸಮಸ್ಯೆಗಳ ಕಾರಣದಿಂದ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

"ಯಾರೂ ಗೊಂದಲಕ್ಕೆ ಒಳಗಾಗಬಾರದು. ಜನರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಿ, ಕೋವಿಡ್ ನಿರ್ವಹಣೆಗೆ ಸಿದ್ಧರಾಗಿ ಇರಬೇಕು" ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಕೋವಿಡ್ ಪರೀಕ್ಷೆಯ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳು ದುಬಾರಿ ಶುಲ್ಕ ವಿಧಿಸುತ್ತಿರುವ ಬಗ್ಗೆ ಬಂದಿರುವ ದೂರುಗಳ ಪರಿಶೀಲನೆ ನಡೆಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಇಲಾಖೆಗೆ ಸಿಎಂ ಸೂಚನೆ ನೀಡಿದರು.

ಇನ್ನು ಈ ಸಭೆಯಲ್ಲಿ ಆರೋಗ್ಯ ಸಚಿವ ಡಾ. ದಿನೇಶ್ ಗುಂಡೂರಾವ್, ಸಿಎಂ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Author:

...
Keerthana J

Copy Editor

prajashakthi tv

share
No Reviews