ಚಿಕ್ಕಬಳ್ಳಾಪುರ :
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಬಾಣಂತಿಯರ ಸಾವು ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ರಾಜಧಾನಿ ಬೆಂಗಳೂರಿನಲ್ಲೇ ಮತ್ತೋರ್ವ ಬಾಣಂತಿ ಸಾವು ವರದಿಯಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಚೊಕ್ಕರೆಡ್ಡಿಹಳ್ಳಿ ಗ್ರಾಮದ ನಿವಾಸಿ 25 ವರ್ಷದ ಅನುಷಾ ಮೃತ ಬಾಣಂತಿಯಾಗಿದ್ದಾರೆ. ಮೃತ ಅನುಷಾ ಕಳೆದ 9 ದಿನಗಳ ಹಿಂದೆಯಷ್ಟೇ ಚಿಕ್ಕಾಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಹೆರಿಗೆಯಾದ ಬಳಿಕ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಮಂಗಳವಾರ ಇವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅನುಷಾ ಇಂದು ಸಾವನ್ನಪ್ಪಿದ್ದಾರೆ.