BANGALORE : ಇನ್ನು ಮಂದೆ ದೊಡ್ಡ ಸಭೆ, ಸಮಾರಂಭ ಮತ್ತು ವಿಜಯೋತ್ಸವ ಕಾರ್ಯಕ್ರಮಗಳಿಗೆ ಹೊಸ ಎಸ್‌ಒಪಿ (ಸ್ಟ್ಯಾಂಡರ್ಡ್ ಆಪರೇಟಿವ್ ಪ್ರೊಸಿಜರ್) ರೂಲ್ಸ್ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಬೆಂಗಳೂರಿನಲ್ಲಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನಿನ್ನೆ ನಡೆದ ಘಟನೆ ರಾಜ್ಯದ ಕ್ರಿಕೆಟ್ ಇತಿಹಾಸದಲ್ಲೇ ಆಗಿರಲಿಲ್ಲ. ಸಾವನ್ನಪ್ಪಿರುವವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಸಿಎಂ ಅವರು ನಿನ್ನೆ ಸಭೆ ನಡೆಸಿ, ಅನೇಕ ಮಾಹಿತಿ ಪಡೆದು ಮಾತನಾಡಿದ್ದಾರೆ. ಈ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಯಾಗಬೇಕೆಂದು ಆದೇಶಿಸಲಾಗಿದೆ ಎಂದರು.
"ದುರ್ಘಟನೆಯಲ್ಲಿ 11 ಜನ ಸಾವನ್ನಪ್ಪಿದ್ದು, 56 ಜನ ಗಾಯಗೊಂಡಿದ್ದಾರೆ. 46 ಜನ ಚಿಕಿತ್ಸೆ ಪಡೆದು ಮನೆಗಳಿಗೆ ಹೋಗಿದ್ದಾರೆ. 10 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಂಭೀರವಾಗಿ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂತಹ ಘಟನೆಗಳು ಆಗಬಾರದು ಎಂಬ ವಿಚಾರದಲ್ಲಿ ಗೃಹ ಇಲಾಖೆಯಿಂದ ಒಂದು ಹೊಸ ಎಸ್‌ಒಪಿ ಜಾರಿಗೆ ತರುತ್ತಿದ್ದೇವೆ ಎಂದರು.