ಬೆಳಗಾವಿ:
ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಮಾರ್ಚ್ 1ರ ವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶಿಸಿದ್ದಾರೆ.
ನರಗುಂದ ಹಾಗೂ ಬಾದಾಮಿ ಶಾಸಕರು ಹಾಗೂ ರೈತ ಮುಖಂಡರು ನೀರನ್ನು ಕಾಲುವೆಗಳಿಗೆ ಮಾರ್ಚ 15ರವರೆಗೆ ಮುಂದುವರಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಲ್ಲಿ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ, ರೈತರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಫೆಬ್ರವರಿ 15ಕ್ಕೆ ಸ್ಥಗಿತಗೊಳಿಸಬೇಕಾಗಿದ್ದ ನೀರನ್ನು ಮಾರ್ಚ್ 1ರವರೆಗೆ ನೀರಾವರಿ ಕಾಲುವೆಗಳ ಮುಖಾಂತರ ಹರಿಸುವುದನ್ನು ಮುಂದುವರೆಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಪ್ರಸಕ್ತ ಬೇಸಿಗೆಯ ತೀವ್ರತೆ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗಾಗಿ ಬೇಡಿಕೆ ಹೆಚ್ಚಾಗುವುದರಿಂದ ಹಿತ- ಮಿತವಾಗಿ ನೀರನ್ನು ಬಳಸುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಆಗಿರುವ ನವಿಲುತೀರ್ಥದ ಅಧೀಕ್ಷಕ ಅಭಿಯಂತರ ವಿ.ಎಸ್. ಮಧುಕರ ಮನವಿ ಮಾಡಿದ್ದಾರೆ.