ಬೆಂಗಳೂರು:
ಮನನೊಂದು ಮಡಿಕೇರಿ ಬಿಜೆಪಿ ಕಾರ್ಯಕರ್ತರೊಬ್ಬರು ಕಚೇರಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ. ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ. ತನ್ನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.
ವಿನಯ್ ಅವರ ಸಾವಿನ ಬೆನ್ನಲ್ಲೇ ಹಲವು ಅನುಮಾನಗಳು ಶುರುವಾಗಿವೆ. ವಿನಯ್ ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು ಎಂಬ ಹೆಸರಿನ ವಾಟ್ಸ್ಆ್ಯಪ್ ಗ್ರೂಪ್ನ ಅಡ್ಮಿನ್ ಆಗಿದ್ದರು. ಇತ್ತೀಚೆಗೆ ಇದೇ ಗ್ರೂಪ್ ಮೂಲಕ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡರೊಬ್ಬರ ಆಕ್ಷೇಪಾರ್ಹ ಫೋಟೋ ಒಂದು ವೈರಲ್ ಆಗಿತ್ತು ಎನ್ನಲಾಗಿದೆ. ಈ ಸಂಬಂಧ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿತ್ತು. ಇದರಿಂದ ಮನನೊಂದು ವಿನಯ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.