ಚಾಮರಾಜನಗರ :
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಬಸ್ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವತ್ತಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಹೊರವಲಯದ ತೆಳ್ಳನೂರು ರಸ್ತೆಯಲ್ಲಿ ನಡೆದಿದೆ.
ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ನಿವಾಸಿ ನವೀನ್ (38) ಮೃತ ದುರ್ದೈವಿಯಾಗಿದ್ದಾನೆ. ಖಾಸಗಿ ಬಸ್ ನಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹಳ್ಳಿಯೊಂದರಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿಕೊಂಡು ರಾತ್ರಿ ವಾಪಸ್ ಹಿಂದಿರುಗುವಾಗ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ಕ್ಲೀನರ್ ಬಸ್ ಚಕ್ರಕ್ಕೇ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಹನೂರು, ಕೊಳ್ಳೇಗಾಲ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಹನೂರು, ಕೊಳ್ಳೇಗಾಲ ಪೊಲೀಸರು ಧಾವಿಸಿ, ಜೆಸಿಬಿ ಮೂಲಕ ಮೃತದೇಹವನ್ನು ಹೊರತೆಗೆದಿದ್ದಾರೆ.