ಚಿಕ್ಕಬಳ್ಳಾಪುರ :
ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿರೋ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಕರಿಯಪ್ಪಲ್ಲಿಯಲ್ಲಿ ನಡೆದಿದೆ. ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬಡಾವಣೆಯ ಜನತೆ ಬೆಚ್ಚಿಬಿದ್ದಿದ್ದಾರೆ.
ಚಿಂತಾಮಣಿ ನಗರದ ಕರಿಯಪ್ಪಲ್ಲಿ ಬಡಾವಣೆಯ ವೆಂಕಟೇಶ್ವರ ಶಾಲೆ ಬಳಿ ಇರೋ ಲಕ್ಷ್ಮೀದೇವಿ ಎಂಬುವವರ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದ್ದು, ಸ್ಫೋಟದ ಭೀಕರಕತೆಗೆ ತಾಯಿ ಲಕ್ಷ್ಮೀದೇವಿ, ಮಕ್ಕಳಾದ ಹರ್ಷವರ್ದನ್, ಸಂಜಯ್ ಹಾಗೂ ಹರಿಪ್ರಿಯಾಗೆ ಸುಟ್ಟಗಾಯಗಳಾಗಿದ್ದು, ಚಿಕ್ಕಬಳ್ಳಾಪುರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ತಾಯಿ ಲಕ್ಷ್ಮೀದೇವಿ ಹಾಗೂ ಮಗ ಹರ್ಷವರ್ಧನ್ ಸ್ಥಿತಿ ಗಂಭೀರವಾಗಿದೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗ್ತಿದೆ. ಇನ್ನು ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಮನೆಯಲ್ಲಿದ್ದ ವಸ್ತುಗಳು ಸುಟ್ಟುಕರಕಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ, ಸ್ಥಳಕ್ಕೆ ಚಿಕ್ಕಬಳ್ಳಾಪುರದ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.