ದಾವಣಗೆರೆ : ದಾವಣಗೆರೆ ಜಿಲ್ಲೆಯ ಹುಲಿಕುಟ್ಟೆ ಗ್ರಾಮದ ಬಳಿ ಭೀಕರ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಅಣಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದಾವಣಗೆರೆಯಿಂದ ಹಾಲೇಕಲ್ ಗ್ರಾಮದತ್ತ ಬಸ್ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಏಕಾಏಕಿ ಕುರಿಗಳ ಗುಂಪು ಪ್ರವೇಶಿಸಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದು ಅಪಘಾತ ಸಂಭವಿಸಿದೆ. ಈ ವೇಳೆ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ 25 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಕೂಡಲೇ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.