ದೇವನಹಳ್ಳಿ :
ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 7ಕ್ಕೂ ಹೆಚ್ಚು ಮಂದಿ ಕಾರ್ಮಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನಕ್ಕೆ ತೆರಳುವ ಬೇಗೂರು ಜಂಕ್ಷನ್ ಬಳಿ ನಡೆದಿದೆ. ಬಸ್ ಪಲ್ಟಿಯಾದ ಪರಿಣಾಮ 7ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಪ್ರಯಾಣಿಕರು ಬಸ್‌ನ ಅಡಿ ಸಿಲುಕಿ ಒದ್ದಾಡುವ ದೃಶ್ಯ ವೈರಲ್ ಆಗಿದೆ. ಈ ದೃಶ್ಯ ನೋಡುಗರ ಮೈ ಜುಂ ಎನ್ನಿಸುವಂತಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ 35 ಕಾರ್ಮಿಕರನ್ನು ಇಂದು ಮಧ್ಯಾಹ್ನದ ಊಟಕ್ಕೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿದ್ದು, 15ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೇಗೂರಿಗೆ ಹೋಗುವ ವೇಳೆ ಘಟನೆ ಸಂಭವಿಸಿದೆ. ಸಿಗ್ನಲ್ ಪಾಸ್ ಆಗಿ ತಿರುವು ತೆಗೆದುಕೊಳ್ಳುವ ವೇಳೆ ಬಸ್ ಪಲ್ಟಿಯಾಗಿದ್ದು, ಬಸ್ ನ ಅಡಿ ಸಿಲುಕಿ ಬಸ್‌ನಲ್ಲಿದ್ದ ಕಾರ್ಮಿಕರು ಒದ್ದಾಡಿದ್ದಾರೆ. ಕಾರ್ಮಿಕರು ಬಸ್ ಅಡಿ ಸಿಲುಕಿ ಒದ್ದಾಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವೈರಲ್ ಆಗ್ತಿದೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಭೀರ ಗಾಯಗೊಂಡಿದ್ದ ಗಾಯಾಳುಗಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗ್ತಿದೆ.