ಧಾರವಾಡ : ಇತ್ತೀಚೆಗೆ ಯುವ ಜನತೆಯಲ್ಲಿ ಯಾವಾಗ ಹೇಗೆ ಸಾವು ಬರುತ್ತೇ ಅನ್ನೋದು ಗೊತ್ತಿಲ್ಲ, ಬೈಕ್ ಓಡಿಸುತ್ತಿರುವಾಗಲೇ ಹೃದಯಾಘಾತವಾಗಿ ಕುಸಿದು ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಕುರುಬಗಟ್ಟಿ ಗ್ರಾಮದ ನಿವಾಸಿ ದುರ್ಗಪ್ಪ ಹರಿಜನ (43) ಎಂಬುವರು ಮೃತ ದುರ್ದೈವಿಯಾಗಿದ್ದಾರೆ.
ದುರ್ಗಪ್ಪ ಬೈಕ್ ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳೀಯರು ಕೂಡಲೇ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.