BANGALORE NEWS : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತದ ನಂತರ, ಈಗರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆದಿದೆಯೆಂದು ಹೇಳಬಹುದು. ಈ ದುರಂತದಲ್ಲಿ 11 ಜನರು ದುರ್ಮರಣ ಹೊಂದಿದ್ದು, 37ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ಅಮಾನತೂ ಭಾರೀ ವಿರೋಧಕ್ಕೆ ಕಾರಣವಾಗಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದ ನಂತರ, ಸರಕಾರ ತ್ವರಿತ ಕ್ರಮ ಕೈಗೊಂಡಿದ್ದು, ಬೆಂಗಳೂರು ನಗರದ ಮಾಜಿ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೇರಿದಂತೆ ಐದು ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ. ಈ ನಿರ್ಧಾರ ಸಾರ್ವಜನಿಕ ವಲಯದಲ್ಲಿ ಮತ್ತು ರಾಜಕೀಯ ವಲಯದಲ್ಲಿ ಆಕ್ರೋಶ ಹುಟ್ಟುಹಾಕಿದೆ.
ಬಿ. ದಯಾನಂದ್ ಅವರ ಅಮಾನತಿಗೆ ಪ್ರತಿಪಕ್ಷಗಳು ಗಂಭೀರ ಆಕ್ಷೇಪ ವ್ಯಕ್ತಪಡಿಸು ತ್ತಿರುವಂತೆಯೇ, ಸಾರ್ವಜನಿಕರಿಂದಲೂ ಸಹ ಬೆಂಬಲ ವ್ಯಕ್ತವಾಗುತ್ತಿದೆ. ಇದರ ಜೊತೆಗೆ, ಈಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿನ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಅವರೂ ಕೂಡ ದಯಾನಂದ್ ಪರ ಧ್ವನಿ ಎತ್ತಿದ್ದಾರೆ.
ಫೇಸ್ಬುಕ್ನ ತಮ್ಮ ಪೋಸ್ಟ್ನಲ್ಲಿ ಟಬು ರಾವ್ ಅವರು, "ದಯಾನಂದ್ ಅವರ ಅಮಾನತು ನಿರ್ಧಾರ ದುಃಖಕರ. ಅವರು ಅತ್ಯಂತ ಘನತೆ, ಪ್ರಾಮಾಣಿಕತೆ ಹೊಂದಿರುವ ಒಳ್ಳೆಯ ಅಧಿಕಾರಿಯಾಗಿದ್ದರು!" ಎಂದು ಬರೆದುಕೊಂಡಿದ್ದಾರೆ. ಅವರ ಈ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.