ದೊಡ್ಡಬಳ್ಳಾಪುರ:
ಇತ್ತೀಚೆಗೆ ಯುವ ಜನತೆಯಲ್ಲಿ ರೀಲ್ಸ್ ಹುಚ್ಚು ಹೆಚ್ಚಾಗಿದ್ದು, ಅತೀ ಹೆಚ್ಚು ವೀಕ್ಷಣೆ ಪಡೆಯುವುದಕ್ಕೊಸ್ಕರ ಯುವ ಜನತೆ ನಾನಾ ಸರ್ಕಸ್ ಮಾಡುತ್ತಿರುತ್ತಾರೆ. ಇದರಿಂದ ಪ್ರಾಣವನ್ನು ಕಳೆದುಕೊಂಡವರು ಸಹ ಇದ್ದಾರೆ. ಇದೀಗ ಅಂತದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ರೈಲು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ಹೊರವಲಯದ ಸಿದ್ದೇನಾಯಕನಹಳ್ಳಿ ರೈಲ್ವೆ ಹಳಿ ಬಳಿ ರೈಲಿಗೆ ಸಿಲುಕಿ ಉತ್ತರ ಪ್ರದೇಶ ಮೂಲದ 18 ವರ್ಷದ ರಾಹುಲ್, 20 ವರ್ಷದ ಬಿಕೇಶ್ ಮತ್ತು 24 ವರ್ಷದ ಲಲನ್ ಎಂಬುವರು ಮೃತಪಟ್ಟಿದ್ದಾರೆ. ಇನ್ನು ರೀಲ್ಸ್ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಈ ಮೂವರು ಯುವಕರು ಕಾರ್ಪೆಂಟರ್ ಕೆಲಸ ಮಾಡುತ್ತಿದ್ದರು. ನೆನ್ನೆ ಸಂಜೆ ಕೆಲಸ ಮುಗಿಸಿಕೊಂಡು ರೈಲ್ವೆ ಹಳಿ ಬಳಿ ಬಂದಿದ್ದರು, ಅಲ್ಲಿ ಮೊಬೈಲ್ ನಲ್ಲಿ ರೀಲ್ಸ್ ಮಾಡುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಯುವಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.