ಬೆಂಗಳೂರು : ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಬೋಧಕರ ಕೊರತೆ ನೀಗಿಸಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಒಟ್ಟು 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಿದೆ. ತಾತ್ಕಾಲಿಕವಾಗಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ.
40,000 ಶಿಕ್ಷಕರು ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಹಾಗೂ 11,000 ಶಿಕ್ಷಕರು ಸರ್ಕಾರಿ ಪ್ರೌಢಶಾಲೆಗಳಿಗೆ ನೇಮಕ ಮಾಡಿಕೊಳ್ಳಲು ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಬೋಧಕರ ಅವಶ್ಯಕತೆಯ ವಿವರಗಳೊಂದಿಗೆ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಪ್ರಸ್ತಾವನೆಗಳ ಆಧಾರದಲ್ಲಿ ಜಿಲ್ಲಾ ಮಟ್ಟದಲ್ಲಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ.
ಈ ತಾತ್ಕಾಲಿಕ ನೇಮಕಾತಿಯಿಂದ ರಾಜ್ಯದ ಶಾಲೆಗಳಲ್ಲಿ ಬೋಧನಾ ಕಾರ್ಯತಂತ್ರ ನಿರ್ವಿಘ್ನವಾಗಿ ಸಾಗಲಿದ್ದು, ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟದ ಮೇಲೂ ಇದು ಉತ್ತಮ ಪರಿಣಾಮ ಬೀರಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. 2025-26ನೇ ಸಾಲಿನಲ್ಲಿ ಪೂರ್ವ ನಿಗದಿಯಂತೆ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿ ನಿರ್ವಹಣೆ ಮಾಡಬೇಕಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ಅಂತ್ಯದವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಸರ್ಕಾರದ ಈ ನಿರ್ಧಾರ ಹಿನ್ನಲೆಯಲ್ಲಿ ಕಳೆದ ಹಲವು ತಿಂಗಳಿಂದ ಬೋಧಕರ ಕೊರತೆಯಿಂದ ಸಮಸ್ಯೆ ಅನುಭವಿಸುತ್ತಿದ್ದ ಶಾಲೆಗಳಿಗೆ ಉಪಯೋಗವಾಗಲಿದೆ.