ಧಾರವಾಡ:
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗೌಡಗೇರಿಯಲ್ಲಿ ನಿರ್ಮಾಣ ಹಂತದಲ್ಲಿರುವ ದ್ಯಾಮವ್ವ ದೇವಿ ದೇಗುಲಕ್ಕೆ ಊರಿನ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣವನ್ನು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿ ಗಮನ ಸೆಳೆದಿದ್ದಾರೆ.
ತಾಲೂಕಿನ ಗೌಡಗೇರಿಯಲ್ಲಿ ನಿರ್ಮಾಣವಾಗುತ್ತಿರುವ ದ್ಯಾಮವ್ವ ದೇವಿ ದೇವಾಲಯದ ಗೋಪುರ ನಿರ್ಮಾಣಕ್ಕೆ ಗ್ರಾಮದ ಮಹಿಳೆಯರು ಸ್ವಯಂ ಪ್ರೇರಣೆಯಿಂದ ಗೃಹಲಕ್ಷ್ಮಿ ಯೋಜನೆಯ ಒಂದು ತಿಂಗಳ ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ. ಇಲ್ಲಿಯವರೆಗೂ 1.10 ಲಕ್ಷ ರೂಪಾಯಿ ಹಣ ಸಂಗ್ರಹವಾಗಿದೆ ಎಂದು ದೇವಸ್ಥಾನದ ಸಮಿತಿ ತಿಳಿಸಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಕೂಡಾ ಒಂದಾಗಿದೆ. ಈ ಯೋಜನೆಯಡಿ ಪ್ರತಿ ಮನೆಯ ಯಜಮಾನಿಗೂ 2,000 ರೂಪಾಯಿ ನೀಡಲಾಗುತ್ತಿದ್ದು, ಇದರಿಂದ ಮನೆ ಖರ್ಚುಗಳನ್ನು ನಿಭಾಯಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯು ಅನೇಕರಿಗೆ ಆಸರೆಯಾಗಿದ್ದು ಮಹಿಳೆಯರು ಅಗತ್ಯ ಹಾಗೂ ಕೆಲಸ, ಉತ್ತಮ ಕಾರ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ.