ತುಮಕೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 26 ರವರೆಗೆ ಮಳೆಯಾಗಲಿರುವ ಸಾದ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ 5 ದಿನಗಳವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ತುಮಕೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಗುಡುಗು ಮಿಂಚಿನ ಅಬ್ಬರವಿರಲಿದೆ ಎನ್ನಲಾಗಿದೆ.
ರಾಜ್ಯದ ಹಲವು ಭಾಗಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ರಾಮನಗರ, ಮೈಸೂರು, ಮಂಡ್ಯ, ತುಮಕೂರು, ಶಿವಮೊಗ್ಗ, ಕೋಲಾರ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಒಣಹವೆ ಮುಂದುವರೆಯಲಿದ್ದು, ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇನ್ನು ಬೆಂಗಳೂರಿನ ಹೆಚ್ಎಎಲ್ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಒಟ್ಟಿನಲ್ಲಿ ಮುಂದಿನ 5 ದಿನಗಳವರೆಗೆ ಮಳೆರಾಯ ಆರ್ಭಟಿಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ.