KARAVARA: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ, ರಾಷ್ಟ್ರೀಯ ಹೆದ್ದಾರಿ 66 (NH-66)ರಲ್ಲಿ ಅನೇಕ ಕಡೆಗಳಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಹೆದ್ದಾರಿಯ ಕೆಲ ಭಾಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಕಾರವಾರ ನಗರದ ಟನಲ್ ಪ್ರದೇಶ, ಬಿಣಗಾದ ಹೆದ್ದಾರಿ ಭಾಗದ ಮೂರು ಪ್ರದೇಶಗಳಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಗೋವಾ–ಕಾರವಾರ–ಮಂಗಳೂರು ಹೆದ್ದಾರಿ 66ರಲ್ಲಿ ಒಂದು ಭಾಗದ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು, ವಾಹನ ಸಂಚಾರಕ್ಕೆ ತಾತ್ಕಾಲಿಕ ಬೇರೆ ಮಾರ್ಗವನ್ನೇ ಉಪಯೋಗಿಸಲು ಸೂಚಿಸಲಾಗಿದೆ. ಹೆದ್ದಾರಿ ಪ್ರಾಧಿಕಾರ ಹಾಗೂ ಕಾಮಗಾರಿಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮಣ್ಣು ತೆಗೆಯುವ ಹಾಗೂ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.
ಕಾರವಾರದಿಂದ ರಾಷ್ಟ್ರೀಯ ಹೆದ್ದಾರಿಯ 19 ಸ್ಥಳಗಳಲ್ಲಿ ವಾಹನ ನಿಲುಗಡೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಎಚ್ಚರಿಕೆಯಿಂದ ಸಂಚರಿಸಲು ವಾಹನ ಸವಾರರಿಗೆ ಸೂಚನೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.