ಕೋಲಾರ : ಕೋಲಾರ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರದ ಪರಿಣಾಮವಾಗಿ ರೈತರು ಭಾರೀ ಬೆಳೆಹಾನಿಗೆ ಒಳಗಾಗಿದ್ದಾರೆ. ತಾಲೂಕಿನ ಹಲವೆಡೆ ಮಳೆ ಆರ್ಭಟದಿಂದ ಮಾವು, ಬಾಳೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳು ವ್ಯಾಪಕವಾಗಿ ನಾಶವಾಗಿದೆ. ಸುಮಾರು 304 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಗಳು ನಾಶವಾಗಿದ್ದು, ಅಂದಾಜು ₹1.21 ಕೋಟಿ ಮೌಲ್ಯದ ನಷ್ಟ ಆಗಿರುವ ಕುರಿತು ಅಂದಾಜು ಮಾಡಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಬೆಳೆಹಾನಿಗೆ ಸಂಬಂಧಿಸಿದ ವರದಿಯನ್ನು ಈಗಾಗಲೇ ಸಲ್ಲಿಸಿದ್ದಾರೆ. ಈ ವರದಿಯ ಆಧಾರದ ಮೇಲೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಲು ಅಧಿಕಾರಿಗಳು ಮುಂದಾಗಿದ್ದಾರೆ.
ಹಾನಿಗೊಳಗಾದ ರೈತರಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸ್ಥಳೀಯ ಆಡಳಿತ ಮತ್ತು ತೋಟಗಾರಿಕೆ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ಸಮೀಕ್ಷಾ ಕಾರ್ಯವೂ ತೀವ್ರಗೊಳಿಸಲಾಗಿದೆ. ಇನ್ನು ಮಳೆ ಇದೇ ರೀತಿ ಮುಂದುವರಿದರೆ ಇನ್ನಷ್ಟು ಹಾನಿ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೈತರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.