MANGALORE : ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೆಲ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ದಾಖಲಾದ ಎಫ್ಐಆರ್ ಪ್ರಕರಣದ ಹಿನ್ನೆಲೆಯಲ್ಲಿ, ಬಿಜೆಪಿ ಮುಖಂಡ ಹಾಗೂ ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರಿಗೆ ಗಡೀಪಾರು ನೋಟಿಸ್ ಜಾರಿ ಮಾಡಲಾಗಿದೆ.
ಈ ನೋಟಿಸ್ ಅನ್ನು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೀಡಿದ್ದು, ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ 58ರಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ನೋಟಿಸ್ ಪ್ರಕಾರ, ಅರುಣ್ ಕುಮಾರ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡುವಂತೆ ಸೂಚಿಸಲಾಗಿದೆ. ಈ ಕ್ರಮವು ಸಾರ್ವಜನಿಕ ಶಾಂತಿ ಮತ್ತು ಶಿಸ್ತು ಕಾಪಾಡುವ ಉದ್ದೇಶದಿಂದ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಇನ್ನು ಜೂನ್ 6 ರಂದು ವಿಚಾರಣೆಗೆ ಸ್ವತಃ ವಕೀಲರ ಮೂಲಕ ಹಾಜರಾಗಬೇಕೆಂದು ನೋಟಿಸ್ ನಲ್ಲಿ ತಿಳಿಸಲಾಗಿದೆ. ಒಂದುವೇಳೆ ವಿಚಾರಣೆಗೆ ಹಾಜರಾಗದೇ ಇದ್ದಲ್ಲಿ, ಲಭ್ಯವಿರುವ ಮಾಹಿತಿಯ ಆಧಾರದ ಮೇಲೆ ಏಕಪಕ್ಷೀಯ ತೀರ್ಮಾನ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯೂ ನೋಟಿಸ್ ನಲ್ಲಿ ನೀಡಲಾಗಿದೆ.