ಮೈಸೂರು:
ಬೇಸಿಗೆಯ ಧಗೆಗೆ ಎಲ್ಲೆಲ್ಲೂ ಬೆಂಕಿ ದುರಂತಗಳು ಸಂಭವಿಸುತ್ತಲೇ ಇವೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಮದ ಬಳಿಯಿರುವ ಅರಣ್ಯ ಪ್ರದೇಶಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅಪಾರ ಪ್ರಮಾಣದ ಗಿಡಮರಗಳು ಸುಟ್ಟುಹೋಗಿವೆ. ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಶಂಕೆ ವ್ಯಕ್ತವಾಗಿದೆ.
ಹುಳಿಮಾವು ಅರಣ್ಯ ಪ್ರದೇಶದ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಗೆಗೆ ಹತ್ತಾರು ಎಕರೆಯಷ್ಟು ಅರಣ್ಯ ಪ್ರದೇಶ ನಾಶವಾಗಿದೆ. ಅರಣ್ಯ ಪ್ರದೇಶದಲ್ಲಿರುವ ಪ್ರಾಣಿ ಪಕ್ಷಿಗಳು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಕೂಡಲೇ ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ಸಿಬ್ಬಂದಿ ಹರ ಸಾಹಸ ಪಟ್ಟಿದ್ದಾರೆ.
ಇನ್ನು ಯಾರೋ ಕಿಡಿಗೇಡಿಗಳಿಂದ ಈ ಕೃತ್ಯ ಜರುಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.