ಮೈಸೂರು: ಎರಡು ಕೆಎಸ್ ಆರ್ ಟಿಸಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಚಾಲಕರು ಸೇರಿದಂತೆ 35ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದ ವಿದ್ಯಾಪೀಠ ಬಳಿ ನಡೆದಿದೆ.
ತಮಿಳುನಾಡಿನ ಕೊಯಮತ್ತೂರು ಕಡೆಯಿಂದ ಮೈಸೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ನಂಜನಗೂಡು ಮಾರ್ಗವಾಗಿ ಚಾಮರಾಜನಗರ ಕಡೆಗೆ ತೆರಳುತ್ತಿದ್ದ ಮತ್ತೊಂದು ಕೆಎಸ್ ಆರ್ ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಓರ್ವ ಬಸ್ ಚಾಲಕ ಕೆಂಪಣ್ಣ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಮತ್ತೋರ್ವ ಬಸ್ ಚಾಲಕ ಸೇರಿದಂತೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 35 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ವಿಷಯ ತಿಳಿದು ನಂಜನಗೂಡು ಸಂಚಾರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.