ಹಾಡುಹಕ್ಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಮೂರು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.
ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಇವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಸುಕ್ರಜ್ಜಿಯು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಅವರನ್ನು ಜಾನಪದ ಕೋಗಿಲೆ ಅಂತಲೂ ಕರೆಯಲಾಗುತ್ತಿತ್ತು.
ಇವರಲ್ಲಿರುವ ಅದ್ಭುತ ಹಾಡುಗಾರಿಕೆ ಕಲೆಯನ್ನು ಗುರುತಿಸಿದ್ದ ಭಾರತ ಸರ್ಕಾರ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಪದ್ಮಶ್ರೀ ಮಾತ್ರವಲ್ಲದೇ, ಸ್ಥಳೀಯ ಬುಡಕಟ್ಟು ಜನಾಂಗದ ಸಂಸ್ಕೃತಿಯನ್ನು ಸಂರಕ್ಷಿಸಿದ್ದಕ್ಕಾಗಿ 1988ರಲ್ಲಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ, 1999ರಲ್ಲಿ ‘ಜಾನಪದ ಶ್ರೀ’ ಪ್ರಶಸ್ತಿ 2006ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ‘ನಾಡೋಜ’ ಗೌರವ ಹಾಗೂ 2009ರಲ್ಲಿ ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿಸಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಇವರಿಗೆ ಲಭಿಸಿದ್ದವು.
ಸುಕ್ರಿ ಬೊಮ್ಮಗೌಡ ಬಾಲ್ಯದಲ್ಲಿದ್ದಾಗ ತಮ್ಮ ತಾಯಿ ಮೂಲಕ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡು, ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಸಂಗೀತ ಹಾಡುಗಳನ್ನು ಸಂರಕ್ಷಿಸಿಕೊಂಡು ಹೋಗುವಲ್ಲಿ ಶ್ರಮಿಸಿದ್ದರು. ಹಾಡುಗಳು ಮಾತ್ರವಲ್ಲದೇ ವಿವಿಧ ಸಾಮಾಜಿಕ ಹೋರಾಟಗಳಲ್ಲಿಯೂ ಮುಂಚೂಣಿಯಲ್ಲಿದ್ದರು. ಇತ್ತೀಚೆಗೆ ಶಿರೂರಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತಕ್ಕೂ ಮರುಗಿದ್ದ ಜಾನಪದ ಕೋಗಿಲೆ ಇಂದು ಅನಾರೊಗ್ಯದ ಕಾರಣದಿಂದ ಕೊನೆಯುಸಿರೆಳೆದಿದೆ.
ಸುಕ್ರಿ ಬೊಮ್ಮಗೌಡ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಕುಮಾರಸ್ವಾಮಿ, ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವಾರು ಜನರು ಕಂಬನಿ ಮಿಡಿದಿದ್ದಾರೆ.