ದೇಶ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಬಿಹಾರಕ್ಕೆ ನೀಡಿದ ಭೇಟಿಯ ಸಂದರ್ಭದಲ್ಲಿ ಭಾರತದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರನ್ನು ಭೇಟಿಯಾಗಿ, ಹೃದಯಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಪಾಟ್ನಾದ ಜೈ ಪ್ರಕಾಶ್ ನಾರಾಯಣ್ ವಿಮಾನ ನಿಲ್ದಾಣದಲ್ಲಿ ನಡೆದ ಈ ಭೇಟಿಯ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ.
14 ವರ್ಷದ ವೈಭವ್ ಸೂರ್ಯವಂಶಿ, ಇತ್ತೀಚೆಗೆ ನಡೆದ ಐಪಿಎಲ್ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿ, ದೇಶದಾದ್ಯಂತ ಗಮನಸೆಳೆದ ಯುವ ಪ್ರತಿಭೆ. ರಾಜಸ್ಥಾನ ರಾಯಲ್ಸ್ ತಂಡದಿಂದ ಆಡಿದ ವೈಭವ್, ಗುಜರಾತ್ ಟೈಟನ್ಸ್ ವಿರುದ್ಧ ಕೇವಲ 35 ಎಸೆತಗಳಲ್ಲಿ ಶತಕ ಬಾರಿಸಿ ಸಂಚಲನ ಮೂಡಿಸಿದ್ದರು. ಈ ಸಾಧನೆಯೊಂದಿಗೆ ಐಪಿಎಲ್ನಲ್ಲಿ ಶತಕ ದಾಖಲಿಸಿದ ಅತ್ಯಂತ ಕಿರಿಯ ಭಾರತೀಯ ಕ್ರಿಕೆಟಿಗ ಎಂಬ ದಾಖಲೆಯನ್ನೂ ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ಪ್ರಧಾನಿ ಮೋದಿ ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಈ ಭೇಟಿಯ ಪೋಟೊಗಳನ್ನು ಹಂಚಿಕೊಂಡಿದ್ದಾರೆ. ಅವರ ಟ್ವೀಟ್ನಲ್ಲಿ, "ಪಾಟ್ನಾ ವಿಮಾನ ನಿಲ್ದಾಣದಲ್ಲಿ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಮತ್ತು ಅವರ ಕುಟುಂಬವನ್ನು ಭೇಟಿಯಾದೆ. ಅವರ ಕ್ರಿಕೆಟ್ ಕೌಶಲ್ಯವನ್ನು ದೇಶಾದ್ಯಂತ ಪ್ರಶಂಸಿಸಲಾಗುತ್ತಿದೆ! ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಹಾರ್ದಿಕ ಶುಭಾಶಯಗಳು," ಎಂದು ಬರೆದು, ಯುವ ಪ್ರತಿಭೆಗೆ ಪ್ರೋತ್ಸಾಹ ನೀಡಿದ್ದಾರೆ.