ರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಪ್ರಾರಂಭ ಮಾಡಲಾಗಿದ್ದ 9 ವಿಶ್ವ ವಿದ್ಯಾಲಯಗಳನ್ನು ಮುಚ್ಚುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇದರ ನಡುವೆಯೇ ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಮತ್ತೊಂದು ನಿರ್ಧಾರವು ಸಹ ಭಾರೀ ಚರ್ಚೆಗೆ ಕಾರಣವಾಗಿದೆ.
ಬಿಜೆಪಿ ಸರ್ಕಾರ 9 ಜಿಲ್ಲೆಗಳಲ್ಲಿ ಆರಂಭಿಸಿದ್ದ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತೇವೆ ಎಂದು ಹಠಕ್ಕೆ ಬಿದ್ದಿರುವ ಕಾಂಗ್ರೇಸ್ ಸರ್ಕಾರ, ಮುಸ್ಲಿಮರ ಶಿಕ್ಷಣಕ್ಕೆ 1,200 ಕೋಟಿ ರೂಪಾಯಿ ವಿನಿಯೋಗಿಸಲು ಹೊರಟಿದೆ. ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬಡವರು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉಪಯೋಗವಾಗುವ ವಿವಿಗಳನ್ನು ಯಾಕೆ ಮುಚ್ಚುತ್ತೀರಿ? ಬಡವರ ಮಕ್ಕಳ ಉನ್ನತ ಶಿಕ್ಷಣಕ್ಕೆ 342 ಕೋಟಿ ರೂಪಾಯಿ ಖರ್ಚು ಮಾಡಲೂ ಸಾಧ್ಯವಾಗದಷ್ಟು ಪಾಪರ್ ಆಗಿದೆಯಾ ನಿಮ್ಮ ಕಾಂಗ್ರೆಸ್ ಸರ್ಕಾರ ಎಂದು ಪ್ರಶ್ನಿಸಿದ್ದಾರೆ. ಬಡವರ ಮಕ್ಕಳ ಶಿಕ್ಷಣಕ್ಕಿಂತ ಓಲೈಕೆ ರಾಜಕಾರಣವೇ ಹೆಚ್ಚಾಗಿರುವ ನಿಮ್ಮ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು ಎಂದೂ ಅವರು ಹೇಳಿದ್ದಾರೆ.
ಅಲ್ಪಸಂಖ್ಯಾತರ ಹಕ್ಕು ದಿನದಲ್ಲಿ ಭಾಗವಹಿಸಿ ಮಾತನಾಡಿದ್ದ ಸಚಿವ ಜಮೀರ್ ಅಹಮದ್ ಅವರು, ಅಲ್ಪಸಂಖ್ಯಾತರ ಶಿಕ್ಷಣಕ್ಕಾಗಿ 1200 ಕೋಟಿ ವಿನಿಯೋಗ ಮಾಡುವುದಾಗಿ ಅವರು ಹೇಳಿದ್ದರು. ಇದರ ಬೆನ್ನಲ್ಲೇ ವಿರೋಧ ವ್ಯಕ್ತವಾಗುತ್ತಿದೆ. ಸಾರ್ವಜನಿಕ ವಲಯದಿಂದಲೂ ಇದಕ್ಕೆ ಪರ - ವಿರೋಧ ವ್ಯಕ್ತವಾಗಿದೆ.