ಶಿರಾ : ಶಿರಾ ನಗರದ ಸರ್ಕಾರಿ ಆಸ್ಪತ್ರೆ ಎದುರು ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, 25 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.
ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ BMTC ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಕ್ಯಾಂಟರ್ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಮಧ್ಯರಾತ್ರಿ 12.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಗೇಶ್, ಧನಂಜಯ, ಮನ್ವಿತ್ ಹಾಗೂ ಪಾರ್ವತಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಘಟನೆಯಲ್ಲಿ ಬಸ್ಸಿನ ಚಾಲಕ ಸೇರಿದಂತೆ 25 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.
ಈ ಕುರಿತು ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.