ಶಿರಾ :
ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ನಡೆಯುತ್ತಲೇ ಇದ್ದು, ಸವಾರರು ಬಲಿಯಾಗುತ್ತಿದ್ದಾರೆ. ಇದೀಗ ಮತ್ತೊಂದು ಅಪಘಾತ ಸಂಭವಿಸಿದ್ದು ಮೂರು ಹಸುಗಳು ದುರ್ಮರಣ ಹೊಂದಿದ್ದರೆ, ಒಂದು ಹಸು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಹೌದು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಕಂಟೈನರ್ ಲಾರಿಗೆ ಹಸು ತುಂಬಿದ್ದ ಮತ್ತೊಂದು ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮ 3 ಹಸುಗಳು ಮೃತಪಟ್ಟಿರುವ ಘಟನೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆಯ ಮಲ್ಲಪ್ಪಗೌಡ ಎಂಬುವವರು ಮಂಡ್ಯದ ಕೆಎಂ ದೊಡ್ಡಿಯಿಂದ ದಾವಣಗೆರೆ ಜಿಲ್ಲೆಗೆ 7 ಸೀಮೆ ಹಸುಗಳನ್ನು ಕೊಂಡೊಯ್ಯುತ್ತಿದ್ದರು. ಈ ವೇಳೆ ಹಸು ತುಂಬಿದ್ದ ಈ ಕ್ಯಾಂಟರ್ ವಾಹನ ನಿಂತಿದ್ದ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ 3 ಸೀಮೆಹಸುಗಳು ಸಾವನ್ನಪ್ಪಿದರೆ, ಮತ್ತೊಂದು ಹಸುವಿನ ಸ್ಥಿತಿ ಗಂಭೀರವಾಗಿದೆ.
ಸದ್ಯ ಸ್ಥಳಕ್ಕೆ ಧಾವಿಸಿರುವ ಪಶು ವೈದ್ಯರು ಗಾಯಗೊಂಡ ಹಸುವಿಗೆ ಚಿಕಿತ್ಸೆಯನ್ನು ನೀಡಿದ್ದಾರೆ. ಘಟನೆ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.