SHIVAMOGGA: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂ ಕುಸಿತ ಸಂಭವಿಸುವ ಸಾಧ್ಯತೆ ಎದುರಾಗಿದ್ದು, ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.
169ಎ ಹೆದ್ದಾರಿ ಮಾರ್ಗದಲ್ಲಿ ಬರುವ ಮಲ್ಪೆ – ಆಗುಂಬೆ ಹೆದ್ದಾರಿ ಪ್ರದೇಶದ ಆಗುಂಬೆ ಘಾಟಿಯಲ್ಲಿ ಈ ಕ್ರಮ ಜಾರಿಗೆ ಬಂದಿದೆ. ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಭಾರಿ ವಾಹನಗಳು ಬದಲಿ ಮಾರ್ಗ ಬಳಸುವಂತೆ ಸೂಚಿಸಿದ್ದಾರೆ.
ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ, ಮಣ್ಣು ಕುಸಿಯುವ, ಮರಗಳು ಬಿದ್ದು ರಸ್ತೆಗೆ ತೊಂದರೆ ಉಂಟಾಗುವ ಸಾಧ್ಯತೆಯನ್ನು ನಿಗದಿಪಡಿಸಿ, ಮುನ್ನೆಚ್ಚರಿಕಾ ಕ್ರಮವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಈ ಮಾರ್ಗದಲ್ಲಿ ಪ್ರಯಾಣಿಸುವ ಸಾರ್ವಜನಿಕರು ತಾತ್ಕಾಲಿಕವಾಗಿ ಬದಲಿ ಮಾರ್ಗಗಳನ್ನು ಬಳಸಬೇಕು. ರಸ್ತೆಯ ಸ್ಥಿತಿಗತಿಯ ಮೇಲ್ವಿಚಾರಣೆ ನಡೆಸಲಾಗುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.