ತುಮಕೂರು :
ತುಮಕೂರಿನಲ್ಲಿ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಗ್ರ ಪರಿಶಿಷ್ಟ ಜಾತಿ ಉಪಜಾತಿಯ ಸಮೀಕ್ಷೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಈ ವೇಳೆ ಪಾಲಿಕೆ ಆಯುಕ್ತ ಬಿ.ವಿ. ಆಶ್ವಿಜ, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಸಮೀಕ್ಷಾ ಕಾರ್ಯದ ನೋಡಲ್ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ತುಮಕೂರು ಜಿಲ್ಲೆಯಾದ್ಯಂತ ಮೇ 5 ರಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿ ಉಪಜಾತಿಗಳ ಸಮೀಕ್ಷಾ ಕಾರ್ಯವು ಕೆಲವು ತಾಲೂಕುಗಳಲ್ಲಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ನಿರೀಕ್ಷಿತ ಮಟ್ಟದಲ್ಲಿ ಸಮೀಕ್ಷಾ ಕಾರ್ಯ ನಡೆಯುತ್ತಿಲ್ಲ, ಅಲ್ಲದೇ ಸಮೀಕ್ಷಾ ಕಾರ್ಯಕ್ಕೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೀಡಬೇಕೆಂದು ಇಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಡಿಡಿಪಿಐ ಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರವರು ಮಾತನಾಡಿ ಗಣತಿದಾರರು ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಸಮೀಕ್ಷೆಯನ್ನು ನಡೆಸಬೇಕು ಎಂದರು. ನೋಡಲ್ ಅಧಿಕಾರಿಗಳು ಪ್ರತಿ ದಿನಗಳಿಗೊಮ್ಮೆ ಸಮೀಕ್ಷೆ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಅಲ್ಲದೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರತಿದಿನ ಗಣತಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಗಣತಿದಾರರಿಗೆ ಮಾರ್ಗದರ್ಶನ ನೀಡಬೇಕು ಎಂದು ನಿರ್ದೇಶನ ನೀಡಿದರು. ಪರಿಶಿಷ್ಟ ಜಾತಿ ಸಮೀಕ್ಷೆಯನ್ನು ಯಾವುದೇ ಗೊಂದಲಗಳು ಉಂಟಾಗದಂತೆ ನಡೆಸಿ ನೈಜ ಮಾಹಿತಿಯನ್ನು ಸಂಗ್ರಹಿಸಬೇಕು ಎಂದರು.
ಈ ವೇಳೆ ನೋಡಲ್ ಅಧಿಕಾರಿಗಳು ನೆಟ್ವರ್ಕ್ ಸಮಸ್ಯೆ ಹಾಗೂ ತಾಂತ್ರಿಕ ಅಡಚಣೆಗಳಿಂದಾಗಿ ಸಮೀಕ್ಷೆ ವಿಳಂಬವಾಗುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಸಮೀಕ್ಷಾ ಆ್ಯಪ್ ಅನ್ನು ಈಗ ಅಪ್‌ಗ್ರೇಡ್ ಮಾಡಲಾಗಿದ್ದು, ಗಣತಿದಾರರು ಈ ಆ್ಯಪ್‌ನಲ್ಲಿ ಸುಲಭವಾಗಿ ಕಾರ್ಯ ನಿರ್ವಹಿಸಬಹುದಾಗಿದೆ ಎಂದು ತಿಳಿಸಿದರು.