Sira : ಅರಿವಿಗೆ ಕಾರ್ಯಾಗಾರಗಳು ಮುಖ್ಯ | ಸದಸ್ಯರಿಗೆ ಶಾಸಕ ಟಿಬಿಜೆ ಕಿವಿಮಾತು

SIRA : ಗ್ರಾಮ ಪಂಚಾಯತ್‌ಗಳ ಕಾರ್ಯವಿಧಾನ, ಕಾನೂನುಗಳು, ಗ್ರಾಮದ ಅಭಿವೃದ್ಧಿ ಯೋಜನೆಗಳು ಮತ್ತು ಇತರ ಸಂಬಂಧಿತ ವಿಷಯಗಳ ಬಗ್ಗೆ ಸದಸ್ಯರಿಗೆ ತಿಳುವಳಿಕೆ ನೀಡುವುದು ಕಾರ್ಯಾಗಾರದ ಉದ್ದೇಶ ಎಂದು ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ದೆಹಲಿಯ ವಿಶೇಷ ಪ್ರತಿನಿಧಿಗಳಾದ ಟಿ.ಬಿ ಜಯಚಂದ್ರ ಅವರು ಶಿರಾದಲ್ಲಿ ತಿಳಿಸಿದರು.

ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಶಿರಾ ತಾಲ್ಲೂಕು ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸರ್ವ ಸದಸ್ಯರ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಸದಸ್ಯರ ಕಾರ್ಯಾಗಾರವು ಗ್ರಾಮ ಪಂಚಾಯತ್ ಸದಸ್ಯರು ತಮ್ಮ ಜವಾಬ್ದಾರಿಗಳು, ಅಧಿಕಾರಗಳು ಮತ್ತು ಗ್ರಾಮದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ತಿಳಿಯಲು ಒಂದು ವೇದಿಕೆಯಾಗಿದೆ. ಈ ಕಾರ್ಯಾಗಾರದಲ್ಲಿ ಸದಸ್ಯರು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು, ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಾಗೂ ಗ್ರಾಮದ ಅಭಿವೃದ್ಧಿಗೆ ಕೊಡುಗೆ ನೀಡಲು ಸಹಾಯ ಮಾಡುತ್ತದೆ ಎಂದರು.

ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಮಾತನಾಡಿ, ಗ್ರಾಮ ಪಂಚಾಯಿತಿಗಳು ಸ್ಥಳೀಯ ಸರ್ಕಾರಗಳಾಗಿ ಕೆಲಸ ನಿರ್ವಹಿಸುತ್ತಿದ್ದು, ಗ್ರಾಮಗಳಿಗೆ ಬೇಕಾಗುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮೊದಲ ಆದ್ಯತೆ ನೀಡಬೇಕು. ನರೇಗಾ ಯೋಜನೆ, ಸ್ವಚ್ಛ ಭಾರತ್ ಮಿಷನ್ ಯೋಜನೆ, ಜಲಜೀವನ್ ಮಿಷನ್, ತೆರಿಗೆ ವಸೂಲಾತಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯಿತಿಗಳು ಅನುಷ್ಠಾನ ಮಾಡುತ್ತಿದ್ದು, ಜನರಿಗೆ ಉತ್ತಮ ಆಡಳಿತ ಮತ್ತು ಸೇವೆಯನ್ನು ನೀಡಬೇಕು ಎಂದರು.

ಈ ಕಾರ್ಯಕ್ರಮದಲ್ಲಿ  ಶಿರಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ,  ಹರೀಶ್,ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗಿಯಾಗಿದ್ದರು.

Author:

...
Sushmitha N

Copy Editor

prajashakthi tv

share
No Reviews