ಗುಬ್ಬಿ :
ಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ದ ಹೊಸಕೆರೆ ಶ್ರೀ ಲಕ್ಷ್ಮಿ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ಜರುಗಿತು. ರಥೋತ್ಸವ ಹಿನ್ನೆಲೆ ಶ್ರೀ ಲಕ್ಷ್ಮಿ ರಂಗನಾಥಸ್ವಾಮಿಗೆ ಸುಪ್ರಭಾತ ಸೇವೆ, ಪಂಚಾಮೃತ ಅಭಿಷೇಕ ಸೇರಿ ನಾನಾ ಪೂಜಾ ಕೈಂಕರ್ಯಗಳನ್ನು ಮುಂಜಾನೆಯಿಂದಲೇ ನಡೆಸಲಾಯಿತು. ಇನ್ನು ರಥೋತ್ಸವ ಹಿನ್ನೆಲೆ ದೇಗುಲ ಹಾಗೂ ರಥಕ್ಕೆ ಹಲವು ಬಗೆಯ ಹೂಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು.
ರಥೋತ್ಸವಕ್ಕೂ ಮುನ್ನ ವಾಡಿಕೆಯಂತೆ ಮಧ್ಯಾಹ್ನ 1 ರ ಸುಮಾರಿಗೆ ಗರುಡ ದೇವನ ಆಗಮನದೊಂದಿಗೆ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಎಳೆಯಲಾಯಿತು. ರಥ ಎಳೆಯುತ್ತಿದ್ದಂತೆ ಭಕ್ತರು ಬಾಳೆಹಣ್ಣು, ದವನ ಎಸೆದು ತಮ್ಮ ಇಷ್ಟಾರ್ಥಗಳನ್ನು ಬೇಡಿಕೊಂಡರು. ರಥೋತ್ಸವಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಆಗಮಿಸಿದ್ದು, ಶ್ರೀ ಲಕ್ಷ್ಮಿರಂಗನಾಥಸ್ವಾಮಿಯ ದರ್ಶನ ಪಡೆದು ಪುನೀತರಾದರು. ರಥೋತ್ಸವಕ್ಕೆ ಹೊಸಕೆರೆ, ತೇವಡೆಹಳ್ಳಿ, ಅರೇಹಳ್ಳಿ, ಶಿವನೇಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸುಡು ಬಿಸಿಲನ್ನು ಲೆಕ್ಕಿಸದೇ ರಥವನ್ನು ಎಳೆದು ಹರಕೆ ತೀರಿಸಿದರು.
ರಥೋತ್ಸವಕ್ಕೆ ಬಂದಿದ್ದ ಸಾವಿರಾರು ಲಕ್ಷಾಂತರ ಭಕ್ತರಿಗೆ ದಾಸೋಹ ವ್ಯವಸ್ಥೆಯನ್ನು ಕೂಡ ಮಾಡಲಾಗಿತ್ತು. ಬಿಸಿಲಿನ ಝಳಕಕ್ಕೆ ಬಸವಳಿದಿದ್ದ ಭಕ್ತರಿಗೆ ಮಜ್ಜಿಗೆ, ಪಾನಕವನ್ನು ವಿತರಿಸಲಾಯಿತು.