ಗುಬ್ಬಿ:
ಕಳೆದ ವಾರ ಅಂದರೆ ಏಪ್ರಿಲ್ 16 ರಂದು ಗುಬ್ಬಿ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಬೆಸ್ಕಾಂ ಇಲಾಖೆ ನಿರ್ಲಕ್ಷ್ಯಕ್ಕೆ ಶಿಕ್ಷಕ ಲೋಕೇಶ್ ಸಾವನ್ನಪ್ಪಿದ್ದರು. ಶಿಕ್ಷಕ ಲೋಕೇಶ್ ಸಾವಿಗೆ ಗುಬ್ಬಿ ತಾಲೂಕಿನಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಶಿಕ್ಷಕನ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹಿಸಿ ಹಾಗೂ ಇಲಾಖೆಯ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರೈತ ಸಂಘದ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ಪ್ರತಿಭಟನೆ ಬಳಿಕ ತಹಶೀಲ್ದಾರ್ ಆರತಿಗೆ ಮನವಿ ಪತ್ರ ಸಲ್ಲಿಸಿದರು.
ಗುಬ್ಬಿ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ದಿಢೀರ್ ಜಮಾಯಿಸಿದ ರೈತ ಮುಖಂಡರು ಬೆಸ್ಕಾಂ ಹಾಗೂ ಗ್ರಾಮ ಪಂಚಾಯ್ತಿ ನಿರ್ಲಕ್ಷ್ಯದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಕೂಡಲೇ ಅಧಿಕಾರಿಗಳು ಎಚ್ಚೆತ್ತು ಅಗತ್ಯ ಕ್ರಮ ಕೈಗೊಳ್ಳದಿದ್ರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಂಬಗಳು ಅಸುರಕ್ಷತೆಯಿಂದ ಕೂಡಿದೆ. ಬೀದಿ ದೀಪ ಹಾರಿಸಲು ಹೋಗಿ ಶಿಕ್ಷಕ ಲೋಕೇಶ್ ಸಾವನ್ನಪ್ಪಿದ್ದು ಕೂಡಲೇ ಶಿಕ್ಷಕ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ರೈತರ ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಆರತಿ ನಿರ್ಲಕ್ಷಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ದಿನಗಳಲ್ಲಿ ಈ ರೀತಿಯ ಅವಘಡಗಳು ಸಂಭವಿಸದಂತೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.