Rain Alert : ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ.!

Rain Alert : ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದೆ. ಜೂನ್ 15ರವರೆಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ
ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರಿ ಮಳೆ ಮತ್ತು ಬಲವಾದ ಗಾಳಿಯ ಮುನ್ಸೂಚನೆ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನು ಓದಿ : ಮುಂದಿನ 5 ದಿನ ಬಿರುಗಾಳಿ ಸಹಿತ ಭಾರೀ ಮಳೆ – ಯೆಲ್ಲೋ ಅಲರ್ಟ್ ಘೋಷಣೆ

ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗುವ ಜಿಲ್ಲೆಗಳು
ಇನ್ನು ಮಲೆನಾಡು ಭಾಗಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಿದ್ರೆ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲೂ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಇತ್ತ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಬಲವಾದ ಗಾಳಿಯೂ ಬೀಸುವ ಸಾಧ್ಯತೆ ಇದೆ.

ಜೂನ್ 15ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ
ಇನ್ನು ಜೂನ್ 4 ರಂದು ರಾಜ್ಯಕ್ಕೆ ಕಾಲಿಟ್ಟ ಮುಂಗಾರು ರಾಜ್ಯಾದ್ಯಂತ ವಿಸ್ತರಿಸಿದ್ರೂ, ಕೆಲವೆಡೆ ವಾಡಿಕೆಯಷ್ಟು ಮಳೆ ಕೊರತೆ ಎದುರಾಗಿದೆ.
ಒಟ್ನಲ್ಲಿ ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಮುಂದಿನ ಕೆಲ ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
ಇದನ್ನು ನೋಡಿ : ಜಿಲ್ಲೆಯ ರೈತರ ಪರವಾಗಿ PARAM ನಿಂತ್ಕೋಬೇಕು-LINK CANALಗೆ K.T.SHANTHKUMAR ವಿರೋಧ




