Rain Alert : ರಾಜ್ಯದಾದ್ಯಂತ ಮುಂಗಾರು ಮಳೆಯ ಕೊರತೆಯ ಬೆನ್ನಲ್ಲೇ ಸಾರ್ವಜನಿಕರಿಗೆ ಹವಾಮಾನ ಇಲಾಖೆಯು ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ.

Rain Alert : ರಾಜ್ಯದಾದ್ಯಂತ ಮುಂಗಾರು ಮಳೆಯ ಕೊರತೆಯಿಂದ ಕಂಗಾಲಾಗಿದ್ದ ಜನರಿಗೆ ಹವಾಮಾನ ಇಲಾಖೆ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 23 ರಿಂದ ಜೂನ್ 25 ರವರೆಗೆ
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಜೂನ್ 23ರಿಂದ ಜೂನ್ 25ರವರೆಗೆ ರಾಜ್ಯದ ಎಲ್ಲಾ ಭಾಗಗಳಲ್ಲಿ ಮಳೆ ಚಟುವಟಿಕೆಗಳು ಹೆಚ್ಚಾಗಲಿವೆ. ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಇದನ್ನು ಓದಿ : ಕರ್ನಾಟಕದಲ್ಲಿ ಮುಂಗಾರು ಚುರುಕು – ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಈ ಜಿಲ್ಲೆಗಳಲ್ಲಿ ಭಾರೀ ಮಳೆ
ಇನ್ನು ಜೂನ್ 27ರಂದು ಕರಾವಳಿ ಭಾಗಗಳಲ್ಲಿ ಮಳೆ ಮತ್ತಷ್ಟು ತೀವ್ರಗೊಳ್ಳುವ ನಿರೀಕ್ಷೆ ಇದೆ. ವಿಶೇಷವಾಗಿ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
8 ಸೆಂಟಿಮೀಟರ್ನಷ್ಟು ದಾಖಲೆಯ ಮಳೆ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಗರಿಷ್ಠ 8 ಸೆಂಟಿಮೀಟರ್ನಷ್ಟು ದಾಖಲೆಯ ಮಳೆಯಾಗಿದೆ. ಇದೇ ಅವಧಿಯಲ್ಲಿ, ಮಳೆಗಾಲದ ನಡುವೆಯೂ ಕಲ್ಬುರ್ಗಿಯಲ್ಲಿ ಮಾತ್ರ ಬೇಸಿಗೆಯನ್ನು ನೆನಪಿಸುವಂತೆ ಗರಿಷ್ಠ 39.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿರುವುದು ಕಂಡುಬಂದಿದೆ.

ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗದ ಜನರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.
ಇದನ್ನು ನೋಡಿ : ರಸ್ತೆಗೆ ಕಸ ಎಸೆದು ಸಿಕ್ಕಿಬಿದ್ದ ಭೂಪ – ಅದೇ ಕಸವನ್ನ ಅವನಿಂದಲೇ ಬಾಚಿಸಿದ ಪಾಲಿಕೆ




