Rain Alert : ರಾಜ್ಯಾದ್ಯಂತ ಜೂನ್ 11ರ ವರೆಗೆ ಭಾರಿ ಮಳೆ ಮುನ್ಸೂಚನೆ

Rain Alert : ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಜೂನ್ 11ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಭಾರೀ ಮಳೆಯ ಸಾಧ್ಯತೆ ಇರುವ ಜಿಲ್ಲೆಗಳು
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಜೊತೆಗೆ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಕೆಲವು ಪ್ರದೇಶಗಳಲ್ಲಿ ಅತಿಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಹವಾಮಾನ ಹೇಗಿರಲಿದೆ?
ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಗಾಳಿಯೊಂದಿಗೆ ಮಳೆ ಸುರಿಯಬಹುದು. ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ 21°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಗಾರು ಚಟುವಟಿಕೆ ವಿಸ್ತರಣೆ
ನೈಋತ್ಯ ಮುಂಗಾರು ಈಗಾಗಲೇ ಅರೇಬಿಯನ್ ಸಮುದ್ರ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಬಹುತೇಕ ಭಾಗಗಳನ್ನು ಆವರಿಸಿದೆ.
ಮುಂದಿನ ದಿನಗಳಲ್ಲಿ ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದ ಉಳಿದ ಭಾಗಗಳಿಗೂ ಮುಂಗಾರು ವಿಸ್ತರಿಸಲು ಅನುಕೂಲಕರ ಪರಿಸ್ಥಿತಿ ಇದೆ ಎಂದು ಐಎಂಡಿ ವರದಿ ತಿಳಿಸಿದೆ.
ಇದನ್ನು ಓದಿ : ಮುಂಗಾರು ಆರ್ಭಟ – ಮುಂದಿನ 5 ದಿನ ಜೋರು ಮಳೆ

ಮಲೆನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆ
ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯ ನಿರೀಕ್ಷೆಯಿದೆ. ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆಯ ಸಾಧ್ಯತೆ ಇದೆ. ಜೂನ್ 9ರಿಂದ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.
ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ವಿಜಯಪುರ, ಕೊಪ್ಪಳ, ಬಳ್ಳಾರಿ, ರಾಯಚೂರು, ಕಲಬುರ್ಗಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಬಾಗಲಕೋಟೆ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ಮುನ್ನೆಚ್ಚರಿಕೆ ಸೂಚನೆ
ಒಟ್ಟಾರೆ, ಮುಂದಿನ ಒಂದು ವಾರ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರಿಯಲಿದ್ದು, ನಾಗರಿಕರು ಎಚ್ಚರದಿಂದ ಇರಬೇಕಾಗಿದೆ.
ಇದನ್ನು ನೋಡಿ : ರಸ್ತೆ ತುಂಬ ಕಸ, ಚರಂಡಿಯಲ್ಲಿ ಹೂಳು ಶಾಸಕ SURESH GOWDA ಹೇಳಿದ್ರೂ ಕ್ರಮವಿಲ್ಲ




