Rain Alert : ಕರ್ನಾಟಕಲ್ಲಿಂದು ಭಾರೀ ಮಳೆ ಸೂಚನೆ: 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಅರಬ್ಬೀ ಸಮುದ್ರದಲ್ಲಿನ ಗಾಳಿಯ ಮೇಲ್ಮೈ ಸುಳಿಯ ಪರಿಣಾಮ ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಧಾರವಾಡ, ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆ ಸುರಿಯಲಿದ್ದು, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನು ಓದಿ : ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ – ಈ ಜಿಲ್ಲೆಗೆ ರೆಡ್ ಅಲರ್ಟ್!

ಈ ಜಿಲ್ಲೆಗಳಿಗೆ ಯೊಲ್ಲೋ ಅಲರ್ಟ್ ಘೋಷಣೆ
ಇನ್ನು ಮೈಸೂರು, ಮಂಡ್ಯ, ತುಮಕೂರು, ಹಾವೇರಿ, ದಾವಣಗೆರೆ, ಗದಗ, ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Rain Alert – ಮೀನುಗಾರರು ಸಮುದ್ರಕ್ಕೆ ಇಳಿಯಬಾರದು
ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಸಮುದ್ರ ಪ್ರಕ್ಷುಬ್ಧವಾಗಲಿರುವುದರಿಂದ ಯಾವುದೇ ಕಾರಣಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ತೀರ ಪ್ರದೇಶದಲ್ಲಿ ವಾಸಿಸುವ ಜನರಿಗೂ ಜಾಗರೂಕರಾಗಿರಲು ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಕೋರಲಾಗಿದೆ.

ಇದನ್ನು ನೋಡಿ : ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಪರಿಹಾರದ ಭರವಸೆ ನೀಡಿದ ಶಾಸಕ




