ಕಲ್ಲು ಕ್ವಾರಿ ದುರಂತ ಕುರಿತು ಕೇಂದ್ರ ಸಚಿವ HDK ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ ಹಾಗೂ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ಕ್ರಮ ಜಾರಿಗೆ ತರಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಸಮೀಪದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ದುರಂತದ ಬಗ್ಗೆ ಕೇಂದ್ರ ಸಚಿವ HDK ತೀವ್ರ ಸಂತಾಪ ವ್ಯಕ್ತಪಡಿಸಿದ್ದು,
ಮೃತ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣವೇ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದೇ ವೇಳೆ ರಾಜ್ಯದ ಎಲ್ಲಾ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ Xನಲ್ಲಿ ಪ್ರತಿಕ್ರಿಯಿಸಿರುವ ಹೆಚ್.ಡಿ. ಕುಮಾರಸ್ವಾಮಿ, ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ತಮಗೆ ತೀವ್ರ ನೋವುಂಟು ಮಾಡಿದೆ ಎಂದು ತಿಳಿಸಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಗಾಯಗೊಂಡಿರುವ ಕಾರ್ಮಿಕರು ಶೀಘ್ರ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಇದರ ಜೊತೆಗೆ, ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣವೇ ಸಮರ್ಪಕ ಪರಿಹಾರ ನೀಡಬೇಕು.
ಜೊತೆಗೆ ಅಗತ್ಯವಿರುವ ಎಲ್ಲಾ ತುರ್ತು ನೆರವು ಒದಗಿಸುವ ಜವಾಬ್ದಾರಿಯನ್ನು ಸರ್ಕಾರ ನಿರ್ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಅಲ್ಲದೆ, ರಾಜ್ಯದ ಕಲ್ಲು ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಜಾರಿಗೆ ತರಬೇಕು.
ಸಂಬಂಧಿತ ಇಲಾಖೆಗಳು ನಿರಂತರ ನಿಗಾ ವಹಿಸಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿಸುವಂತೆ ಸರ್ಕಾರ ಆದೇಶಿಸಬೇಕು ಎಂದು ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಪದೇ ಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ ತಪ್ಪಿತಸ್ಥರ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳದಿರುವುದು ಅತ್ಯಂತ ಬೇಸರದ ಸಂಗತಿ ಎಂದು ಅವರು ಹೇಳಿದ್ದಾರೆ.
ಇಂತಹ ನಿರ್ಲಕ್ಷ್ಯವೇ ದುರಂತಗಳು ಮರುಕಳಿಸಲು ಪ್ರಮುಖ ಕಾರಣವಾಗಿದ್ದು, ಇನ್ನು ಮುಂದೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಅದೇ ರೀತಿ, ಕ್ವಾರಿ ಮಾಲೀಕರು ಸಹ ಕಾರ್ಮಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ,
ಎಲ್ಲಾ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಇಂತಹ ದುರ್ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
MUST WATCH : ದೇವರ ತಾಳಿಯನ್ನೇ ಟಾರ್ಗೆಟ್ ಮಾಡ್ತಿದ್ದ ಅಂತರ್ ರಾಜ್ಯ ಕಳ್ಳರನ್ನ ಬೇಟೆಯಾಡಿದ ಖಾಕಿ | TURUVEKERE NEWS |




